ಅಭ್ಯರ್ಥಿಗಳನ್ನು ತಿರಸ್ಕರಿಸುವ ಹಕ್ಕು ಮತದಾರನಿಗೆ ಇದೆ: ಸುಪ್ರೀಂ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗೆ ಸ್ಪರ್ಧಿಸಿದ ಎಲ್ಲ ಅಭ್ಯರ್ಥಿಗಳನ್ನು ತಿರಸ್ಕರಿಸುವ ಹಕ್ಕು ಮತದಾರನಿಗೆ ಇದೆ ಎಂದು ಸುಪ್ರೀಂ ಕೋರ್ಟ್ ..
ನವದೆಹಲಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗೆ ಸ್ಪರ್ಧಿಸಿದ ಎಲ್ಲ ಅಭ್ಯರ್ಥಿಗಳನ್ನು ತಿರಸ್ಕರಿಸುವ ಹಕ್ಕು ಮತದಾರನಿಗೆ ಇದೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಐತಿಹಾಸಿಕ ತೀರ್ಪು ನೀಡಿದೆ.
ಮುಖ್ಯನಾಯಮೂರ್ತಿ ಪಿ.ಸದಾಶಿವಂ ಹಾಗೂ ನ್ಯಾಯಮೂರ್ತಿ ರಂಜನ್ ಪ್ರಕಾಶ್ ದೇಶಾಯಿ ಮತ್ತು ನ್ಯಾ.ರಂಜನ್ ಗೋಗೊಯಿ ಅವರನ್ನೊಳಗೊಂಡ ಸುಪ್ರೀಂ ಪೀಠ ಈ ಮಹತ್ವದ ಆದೇಶ ನೀಡಿದ್ದು, ಚುನಾವಣೆಗೆ ಸ್ಪರ್ಧಿಸಿದ ಎಲ್ಲ ಅಭ್ಯರ್ಥಿಗಳನ್ನು ತಿರಸ್ಕರಿಸುವ ಹಕ್ಕು ಮತದಾರನಿಗೆ ಇದೆ ಎಂದು ಹೇಳಿದೆ. ಅಲ್ಲದೆ ಈ ಸಂಬಂಧ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದ್ದು, ಮತದಾರ ಅಭ್ಯರ್ಥಿಗಳನ್ನು ತಿರಸ್ಕರಿಸಲು ಮತಯಂತ್ರ(ಇವಿಎಂ)ದಲ್ಲಿ ಪ್ರತ್ಯೇಕ ಬಟನ್(ಗುಂಡಿ) ಸೌಲಭ್ಯ ಕಲ್ಪಿಸುವಂತೆ ಸೂಚಿಸಿದೆ.
ಮುಂಬರುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಿಂದಲೇ ಅಭ್ಯರ್ಥಿಗಳನ್ನು ತಿರಸ್ಕರಿಸುವ ವಿಶೇಷ ಬಟನ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಅಲ್ಲದೆ ಈ ಸಂಬಂಧ ಚುನಾವಣಾ ಆಯೋಗಕ್ಕೆ ಎಲ್ಲ ರೀತಿಯ ಸಹಕಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ತೀರ್ಪು ಪ್ರಕಟಿಸಿದ ಮುಖ್ಯನಾಯಮೂರ್ತಿ ಪಿ.ಸದಾಶಿವಂ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಭ್ಯರ್ಥಿಗಳನ್ನು ತಿರಸ್ಕರಿಸುವ ಹಕ್ಕನ್ನು ಮತದಾರನಿಗೆ ನೀಡಬೇಕಾದ ಅಗತ್ಯ ಇದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.