ಕೇಂದ್ರ ಸಚಿವ ಅಧಿರ್ ಚೌಧರಿ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ
ನವದೆಹಲಿ: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ರಾಜ್ಯ ರೈಲ್ವೆ ಸಚಿವ ಅಧಿರ್ ಚೌಧರಿ ಅವರ ಮೇಲೆ ಪೊಲೀಸರು ಶನಿವಾರ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರು ಇಂದು ಮುಷಿರಬಾದ್ ನ್ಯಾಯಾಲಯದಲ್ಲಿ ಅಧಿರ್ ಚೌಧರಿ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ್ದು, ಅಧಿರ್ ಅವರಿಗೆ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಲಾಗಿದೆ.
2011ರಂದು ಗೋಲಾಬಜಾರ್ ಎಂಬ ಪ್ರದೇಶದಲ್ಲಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತ ಕಮಲ್ ಶೀಖ್ ಅವರನ್ನು ಹತ್ಯೆಗೈಯಲಾಗಿತ್ತು. ಈ ಕೊಲೆಗ ಅಧಿರ್ ಚೌಧರಿ ಅವರು ಒಳಸಂಚು ನಡೆಸಿದ್ದಾರೆ ಎಂದು ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.
ವಿಶೇಷ ಜಿಲ್ಲಾನ್ಯಾಯಧೀಶರಾದ ಅಲಿ ಬಿಸ್ವಾಸ್ ಅವರು, ಅಧಿರ್ ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದ್ದಾರೆ.
ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದೆ. ತೃಣಮೂಲ ಕಾಂಗ್ರೆಸ್ ನನ್ನ ವಿರುದ್ಧ ಪಿತೂರಿ ನಡೆಸುತ್ತಿದ್ದೆ. ನಾನು ಯಾವುದೇ ಅಪರಾಧ ಮಾಡಿಲ್ಲ. ನಾನೂ ಈ ಬಗ್ಗೆ ಪೂರ್ಣ ವರದಿಯನ್ನು ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಸೋನಿಯಾ ಗಾಂಧಿ ಅವರಿಗೆ ಸಲ್ಲಿಸುವೆ ಎಂದು ಅಧಿರ್ ಚೌಧರಿ ಹೇಳಿದ್ದಾರೆ.
ಮಮತಾ ಬ್ಯಾನರ್ಜಿ ಸರ್ಕಾರ ಪೊಲೀಸರನ್ನು ದುರಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವ ಹುನ್ನಾರ ನಡೆಸುತ್ತಿದೆ. ನಾನು ಆರೋಪ ಮುಕ್ತನಾಗಿ ಬರುತ್ತೇನೆ ಎಂದ ಅಧಿರ್, ರಾಜ್ಯದಲ್ಲಿ ಕಾಂಗ್ರೆಸ್ನ್ನು ಕುಗ್ಗಿಸುವ ಉದ್ದೇಶದಿಂದ ಪೊಲೀಸರನ್ನು ಬಳಸಿಕೊಂಡು ಟಿಎಂಸಿ ಈ ರೀತಿ ಸಂಚು ರೂಪಿಸಿದೆ ಎಂದು ಆರೋಪಿಸಿದ್ದಾರೆ.