ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸಂತೋಷ್ ಲಾಡ್ ವಿರುದ್ಧ ಬಿಜೆಪಿ ಪ್ರತಿಭಟನೆ

ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ಸಂತೋಷ ಲಾಡ್ ಅವರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕು..

Lingaraj Badiger
Updated On : 30 Sept 2013, 4:59 am

ಬೆಂಗಳೂರು: ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ಸಂತೋಷ್ ಲಾಡ್ ಅವರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕು ಎಂದು ಆಗ್ರಹಿಸಿ ಬಿಜೆಪಿ ವಿಧಾನಸೌಧದ ಹಿಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದೆ.

ಇಂದು ಬೆಳಗ್ಗೆ 11 ಗಂಟೆಯಿಂದ ಆರಂಭವಾಗಿರುವ ಧರಣಿಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಡಿ.ವಿ.ಸದಾನಂದಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಉಪ ಮುಖ್ಯಮಂತ್ರಿ ಆರ್.ಅಶೋಕ್, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹಾಗೂ ಮಾಜಿ ಸಚಿವ ಸಿ.ಟಿ.ರವಿ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.

ಈ ವೇಳೆ ಮಾತನಾಡಿದ ಈಶ್ವರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಅವರು ಅಕ್ರಮ ಗಣಿಗಾರಿಕೆ ಮೂಲಕ ಮುಂದಿನ ಲೋಕಸಭೆ ಚುನಾವಣೆಗೆ ದುಡ್ಡು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರದಲ್ಲಿದ್ದಾಗ ಕಾಂಗ್ರೆಸ್ ಇದೇ ಅಕ್ರಮ ಗಣಿಗಾರಿಕೆ ವಿಚಾರವನ್ನೇ ಕೈಗೆತ್ತಿಕೊಂಡು ಸರ್ಕಾರದ ವಿರುದ್ಧ ಹೋರಾಟ ನಡೆಸಿತ್ತು. ಇದೀಗ ಬಿಜೆಪಿ ಸಹ ಅದೇ ಪ್ರಕರಣವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕಿಳಿದಿದೆ.

ಈ ನಿಟ್ಟಿನಲ್ಲಿ ಈಗಾಗಲೇ ಸಂತೋಷ್ ಲಾಡ್ ವಜಾಕ್ಕೆ ಆಗ್ರಹಿಸಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರಿಗೆ ದೂರು ಸಲ್ಲಿಸಿರುವ ಬಿಜೆಪಿ, ಇದೇ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧವೂ ಕಿಡಿ ಕಾರಿದೆ. ಹಿಂದೆ ಅಕ್ರಮ ಗಣಿಗಾರಿಕೆ ವಿರುದ್ಧ ಬಳ್ಳಾರಿ ಪಾದಯಾತ್ರೆ ನಡೆಸಿದ್ದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಬಳಿಕ ಅಕ್ರಮ ಗಣಿಗಾರಿಕೆ ನಡೆಸಿದವರನ್ನು ಜತೆಗಿಟ್ಟುಕೊಂಡು ಆಡಳಿತ ನಡೆಸುತ್ತಿದ್ದಾರೆ ಎಂದೂ ಆರೋಪಿಸಿದೆ.

ಇನ್ನು ಈ ಬಗ್ಗೆ ಮೈಸೂರಿನಲ್ಲಿ ವರದಿಗಾರರಿಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಂತೋಷ್ ಲಾಡ್ ಅಕ್ರಮ ಗಣಿಗಾರಿಕೆ ನಡೆಸಿದ ಬಗ್ಗೆ ನನ್ನ ಬಳಿ ದಾಖಲೆ ಇಲ್ಲ. ಸಿಇಸಿ ವರದಿಯನ್ನು ಎಸ್.ಆರ್.ಹಿರೇಮಠ್ ತಪ್ಪಾಗಿ ಅರ್ಥ ಮಾಡಿಕೊಂಡಿದ್ದಾರೆ ಎಂದು ಹೇಳುವ ಮೂಲಕ ಮತ್ತೊಮ್ಮೆ ತಮ್ಮ ಸಂಪುಟ ಸಹದ್ಯೋಗಿಯನ್ನು ಸಿಎಂ ಸಮರ್ಥಿಸಿಕೊಂಡಿದ್ದಾರೆ.

ಅಕ್ರಮ ಗಣಿಗಾರಿಕೆಗೆ ಸದಾ ನನ್ನ ವಿರೋಧ ಇದೆ. ಸಂತೋಷ್ ಲಾಡ್ ವಿರುದ್ಧ ಸೂಕ್ತ ದಾಖಲೆ ನೀಡಿದರೆ, ಕ್ರಮ ತೆಗೆದುಕೊಳ್ಳುವ ಬಗ್ಗೆ ಪರಿಶೀಲಿಸುವುದಾಗಿ ಸಿಎಂ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement