ದೊಡ್ಡ ಪಕ್ಷವಾಗಿ ಬಿಜೆಪಿ: ಶರದ್ ಪವಾರ್
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಭವಿಷ್ಯ ನುಡಿದಿದ್ದಾರೆ.
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ದ ಮುಖ್ಯಸ್ಥ ಶರದ್ ಪವಾರ್ ಅವರು ಬುಧವಾರ ಭವಿಷ್ಯ ನುಡಿದಿದ್ದಾರೆ.
ಮರಾಠಿ ಧೈನಿಕವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಶರದ್ ಪವಾರ್ ಅವರು, ಆಡಳಿತಾರೂಢ ಕಾಂಗ್ರೆಸ್ ಪಕ್ಷ ಚುನಾವಣೆ ನಂತರ ಎರಡನೇ ದೊಡ್ಡ ಪಕ್ಷವಾಗಲಿದ್ದು, ಎನ್‌ಡಿಎ ಮೈತ್ರಿಕೂಟ ದೊಡ್ಡಪಕ್ಷವಾಗಿ ಹೊರಹೊಮ್ಮಲಿದೆ. ಅಲ್ಲದೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಎಐಡಿಎಂಕೆ, ಪ.ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಪಕ್ಷಗಳು 3ನೇ ದೊಡ್ಡ ಪಕ್ಷಗಳಾಗಲಿವೆ ಎಂದು ಶರದ್ ಪವಾರ್ ಹೇಳಿದ್ದಾರೆ.
ಅಲ್ಲದೆ ಮುಂದಿನ 10ರಿಂದ 15 ವರ್ಷಗಳ ಕಾಲ ಮೈತ್ರಿಕೂಟ ಸರ್ಕಾರಗಳೇ ಮುಂದುವರೆಯಲಿದ್ದು, ಪ್ರಾದೇಶಿಕ ಪಕ್ಷಗಳು ಈ ಹಿಂದಿಗಿಂತಲೂ ಹೆಚ್ಚು ಪ್ರಬಲವಾಗಲಿವೆ ಎಂದು ಪವಾರ್ ಹೇಳಿದ್ದಾರೆ.
ಮೋದಿ ಪ್ರಧಾನಿಯಾಗಲ್ಲ
ಇದೇ ವೇಳೆ ದೇಶದ ಮುಂದಿನ ಪ್ರಧಾನಿ ಯಾರಾಗುತ್ತಾರೆಂಬ ವಿಚಾರದ ಕುರಿತು ಮಾತನಾಡಲು ನಿರಾಕರಿಸಿದ ಪವಾರ್ ಅವರು, ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗುವುದಿಲ್ಲ ಎಂದು ಹೇಳಿದರು. ಅಂತೆಯೇ ತಾವು ಪ್ರಧಾನಿ ಹುದ್ದೆಯ ಸ್ಪರ್ಧಿಯಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಶರದ್ ಪವಾರ್ ಅವರು ಎನ್‌ಡಿಎ ಮೈತ್ರಿಕೂಟವನ್ನು ಸೇರಲಿಚ್ಛಿಸಿದ್ದಾರೆ ಎಂಬ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಹೇಳಿಕೆಯನ್ನು ನಿರಾಕರಿಸಿದ ಶರದ್ ಪವಾರ್ ಅವರು, ಉದ್ಧವ್ ಠಾಕ್ರೆ ಅವರ ಹೇಳಿಕೆ ಅಪ್ರಭುದ್ಧ ಮತ್ತು ಬೇಜವಾಬ್ದಾರಿ ತನದ ಹೇಳಿಕೆ ಎಂದು ಪವಾರ್ ಕಿಡಿಕಾರಿದರು.
15 ವರ್ಷಗಳಿಂದ ಯುಪಿಎ ಮೈತ್ರಿಕೂಟದಲ್ಲಿ ಗುರುತಿಸಿಕೊಂಡಿರುವ ಶರದ್‌ಪವಾರ್ ಅವರು, ಫೆಬ್ರವರಿಯಲ್ಲಿ 2002ರ ಗೋದ್ರಾ ಹತ್ಯಾಕಾಂಡದಲ್ಲಿ ನರೇಂದ್ರ ಮೋದಿ ಅವರ ಪಾತ್ರದ ಕುರಿತು ಚರ್ಚಿಸುವ ಅಗತ್ಯವಿಲ್ಲ ಎಂದು ಹೇಳುವ ಮೂಲಕ ಚರ್ಚೆಗೆ ಗ್ರಾಸವಾಗಿದ್ದರು.
ಕಳೆದ ಭಾನುವಾರ ಮಹಾರಾಷ್ಟ್ರದಲ್ಲಿ ನಡೆದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪವಾರ್ ಅವರು, ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ವಿರುದ್ಧ ತೀವ್ರ ಟೀಕಾ ಪ್ರಹಾರ ನಡೆಸಿದರು. ಕಾಂಗ್ರೆಸ್‌ನ ತ್ಯಾಗ ಮತ್ತು ಬಲಿದಾನದ ಬಗ್ಗೆ ತಿಳಿಯದ ನರೇಂದ್ರ ಮೋದಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸುವ ಅಗತ್ಯವಿದ್ದು, ಮೋದಿ ದೇಶಕ್ಕೆ ಮಾರಕ ಎಂದು ಟೀಕಿಸಿದ್ದರು.