ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಅನಂತ್, ಬಿಎಸ್‌ವೈ, ಮೊಯಿಲಿಗೆ ಸೋಲು: ಗುಪ್ತಚರ ವರದಿ

ರಾಜ್ಯದ ಮೂವರು ಪ್ರಭಾವಿ ರಾಜಕಾರಣಿಗಳಾದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ್‌ಕುಮಾರ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ...

Lingaraj Badiger
Updated On : 4 Apr 2014, 2:49 am

ಬೆಂಗಳೂರು: ರಾಜ್ಯದ ಮೂವರು ಪ್ರಭಾವಿ ರಾಜಕಾರಣಿಗಳಾದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ್‌ಕುಮಾರ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಎಂ.ವೀರಪ್ಪ ಮೊಯಿಲಿ ಅವರು ಲೋಕಸಭೆ ಚುನಾವಣೆಯಲ್ಲಿ ಸೋಲು ಅನುಭವಿಸುವ ಸಾಧ್ಯತೆ ಇದೆ ಎಂದು ಗುಪ್ತದಳ ಸಂಸ್ಥೆ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ತಿಳಿಸಿದೆ.

ಪ್ರಮುಖ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ರಾಜ್ಯದಲ್ಲಿ ತಲಾ 9ರಿಂದ 12 ಸ್ಥಾನಗಳಲ್ಲಿ ಮತ್ತು ಜೆಡಿಎಸ್ 3ರಿಂದ 4 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದೆ ಎಂದು ಗುಪ್ತಚರ ಸಂಸ್ಥೆ ನಡೆಸಿದ ಸಮೀಕ್ಷೆಯಿಂದ ಬಹಿರಂಗವಾಗಿದೆ. ಚುನಾವಣೆಗೂ ಎರಡು ವಾರ ಮುನ್ನ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸಿ ಗುಪ್ತಚರ ಸಂಸ್ಥೆ ತನ್ನ ಮೊದಲ ವರದಿ ನೀಡಿದೆ. ಈ ವರದಿಯ ಪ್ರಮುಖ ಅಂಶಗಳನ್ನು ಆಂಗ್ಲ ದಿನಪತ್ರಿಕೆಯೊಂದು ವರದಿ ಮಾಡಿದ್ದು, ಇದು ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಉಂಟು ಮಾಡಿದೆ.

ಚುನಾವಣೆ ವೇಳೆ ಗುಪ್ತಚರ ಸಂಸ್ಥೆ ಒಟ್ಟು ಮೂರು ಸಮೀಕ್ಷಾ ವರದಿಗಳನ್ನು ಸಿದ್ಧಪಡಿಸಿ ರಾಜಕೀಯ ಪಕ್ಷಗಳಿಗೆ ನೀಡುತ್ತದೆ. ಚುನಾವಣೆಗೆ ಇನ್ನು ಎರಡು ದಿನ ಬಾಕಿ ಇರುವಾಗ ಒಂದು ಹಾಗೂ ಮತದಾನದ ಬಳಿಕ ಮತ್ತೊಂದು ಸಮೀಕ್ಷಾ ವರದಿಯನ್ನು ನೀಡುತ್ತದೆ.

ಗುಪ್ತಚರ ವರದಿಯ ಸಮೀಕ್ಷೆಯ ಪ್ರಕಾರ, ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷ ತನ್ನ ಖಾತೆ ತೆರೆಯುವ ಸಾಧ್ಯತೆ ಇಲ್ಲ ಎಂದು ಹೇಳಲಾಗಿದೆ.

ರಾಜ್ಯದ ಏಳು ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ನೇರ ಹಣಾಹಣಿ ಏರ್ಪಡಲಿದ್ದು, ಈ ಪೈಕಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಹೆಚ್ಚು. ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ ಮತ್ತು ಮಂಗಳೂರಿನಲ್ಲಿ ಕಾಂಗ್ರೆಸ್‌ಗೆ ಜಯ ಖಚಿತ. ಬೆಂಗಳೂರು ಗ್ರಾಮಾಂತರದಲ್ಲೂ ತನ್ನ ಸ್ಥಾನ ಉಳಿಸಿಕೊಳ್ಳುವ ಕಾಂಗ್ರೆಸ್, ಉತ್ತರದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡಗೆ ತೀವ್ರ ಸ್ಪರ್ಧೆ ನೀಡಲಿದೆ ಎಂದು ವರದಿ ಹೇಳಿದೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತದಿಂದ ಐದು ಬಾರಿ ಸಂಸದರಾಗಿರುವ ಬಿಜೆಪಿ ಅಭ್ಯರ್ಥಿ ಅನಂತ್‌ಕುಮಾರ್ ವಿರುದ್ಧ ಕಾಂಗ್ರೆಸ್‌ನ ನಂದನ್ ನಿಲೇಕಣಿ ಗೆಲುವು ಖಚಿತವಾಗಿದೆ. ಈ ಕ್ಷೇತ್ರದಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿದ್ದು, ಈ ಪೈಕಿ ನಾಲ್ಕರಲ್ಲಿ ಬಿಜೆಪಿ ಹಾಗೂ ನಾಲ್ಕರಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಕಳೆದ ಬಾರಿ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಬೈರೇಗೌಡ ಅವರ ವಿರುದ್ಧ ಅನಂತ್ ಕುಮಾರ್ ಕಡಿಮೆ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಗುಪ್ತಚರ ವರದಿ ಹೇಳಿತ್ತು. ಅದು ನಿಜವೂ ಆಗಿತ್ತು. ಈ ಕ್ಷೇತ್ರದಲ್ಲಿ ಬ್ರಾಹ್ಮಣ ಮತದಾರರು ಅತಿ ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಅನಂತ್ ಕುಮಾರ್ ಸತತ ಐದು ಬಾರಿ ಆಯ್ಕೆಯಾಗಿದ್ದರು. ಆದರೆ ಈ ಬಾರಿ ಬ್ರಾಹ್ಮಣ ಮತಗಳು ವಿಂಗಡಣೆಯಾಗಿದ್ದು, ನಿಲೇಕಣಿ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಸಮೀಕ್ಷಾ ವರದಿ ಹೇಳಿದೆ.

ಇನ್ನು ಒಕ್ಕಲಿಗ ಪ್ರಾಬಲ್ಯವಿರುವ ಚಿಕ್ಕಬಳ್ಳಾಪುರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜೆಡಿಎಸ್‌ನಿಂದ ಕಣಕ್ಕಿಳಿದಿರುವುದರಿಂದ ಕಾಂಗ್ರೆಸ್ ಅಭ್ಯರ್ಥಿ, ಕೇಂದ್ರ ಸಚಿವ ಎಂ.ವೀರಪ್ಪ ಮೊಯಿಲಿ ಅವರ ಪರಾಭವಗೊಳ್ಳುವ ಸಾಧ್ಯತೆ ಹೆಚ್ಚು.

ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಜೆಡಿಎಸ್ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಗೆಲುವು ಖಚಿತ ಎಂದು ಗುಪ್ತಚರ ವರದಿ ತಿಳಿಸಿದೆ.

ವರದಿಯ ಪ್ರಕಾರ ಕಾಂಗ್ರೆಸ್ ಖಚಿತವಾಗಿ ಗೆಲ್ಲುವ ಕ್ಷೇತ್ರಗಳು: ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೊಡಗು-ಮೈಸೂರು, ಚಾಮರಾಜನಗರ, ಉಡುಪಿ-ಚಿಕ್ಕಮಗಳೂರು, ಕೋಲಾರ, ಬೀದರ್, ಗುಲ್ಬರ್ಗಾ ಮತ್ತು ರಾಯಚೂರು.

ವರದಿಯ ಪ್ರಕಾರ ಬಿಜೆಪಿ ಖಚಿತವಾಗಿ ಗೆಲ್ಲುವ ಕ್ಷೇತ್ರಗಳು: ಬೆಂಗಳೂರು ಉತ್ತರ, ಧಾರವಾಡ, ಬೆಳಗಾವಿ, ಬಳ್ಳಾರಿ, ತುಮಕೂರು, ಹಾವೇರಿ, ಬಿಜಾಪುರ ಮತ್ತು ಬಾಗಲಕೋಟೆ.

ವರದಿಯ ಪ್ರಕಾರ ಜೆಡಿಎಸ್ ಖಚಿತವಾಗಿ ಗೆಲ್ಲುವ ಕ್ಷೇತ್ರಗಳು: ಹಾಸನ, ಚಿಕ್ಕಬಳ್ಳಾಪುರ ಹಾಗೂ ಶಿವಮೊಗ್ಗ

ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಚಿತ್ರದುರ್ಗ, ಕಾರವಾರ, ಚಿಕ್ಕೋಡಿ, ಮಂಗಳೂರು ಮತ್ತು ಕೊಪ್ಪಳ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇದ್ದರೂ ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಕೇಂದ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸುವುದು ನಿಶ್ಚಿತ ಎಂದು ವರದಿಯಲ್ಲಿ ಹೇಳಲಾಗಿದೆ.

ದಾವಣಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ನಡುವೆ ತ್ರಿಕೋನ ಸ್ಫರ್ಧೆ ಏರ್ಪಟ್ಟಿದ್ದು, ಇಲ್ಲಿ ಅಚ್ಚರಿಯ ಫಲಿತಾಂಶ ಹೊರಬಿಳುವ ಸಾಧ್ಯತೆ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement