ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬಿಜೆಪಿಯಿಂದ ಬಳ್ಳಾರಿ ಲೂಟಿ: ರಾಹುಲ್

Vishwanath S
Updated On : 4 Apr 2014, 4:29 am

ಬಳ್ಳಾರಿ: ರಾಜ್ಯದಲ್ಲಿ ಬಿಜೆಪಿ ಅಧಿಕಾರವಧಿಯಲ್ಲಿ ಬಳ್ಳಾರಿಯನ್ನು ಬಹಿರಂಗವಾಗಿ ಲೂಟಿ ಮಾಡಲಾಗಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಶುಕ್ರವಾರ ಆರೋಪಿಸಿದ್ದಾರೆ.

ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ಅಧಿಕಾರವಧಿಯಲ್ಲಿ ಬಳ್ಳಾರಿಯನ್ನು ಬಹಿರಂಗವಾಗಿ ಲೂಟಿ ಮಾಡಲಾಗಿದೆ ಎಂದು ಆರೋಪಿಸಿದರು. ಅಲ್ಲದೆ ದೇಶದ ಎಲ್ಲೆಡೆ ಬಿಜೆಪಿ ನಾಯಕರು ಭ್ರಷ್ಟಾಚಾರದ ವಿರುದ್ಧ ಘಂಟಾಘೋಷವಾಗಿ ಮಾತನಾಡುತ್ತಾರೆ. ಆದರೆ ತಮ್ಮದೇ ನಾಯಕರು ಭ್ರಷ್ಟಾಚಾರದಲ್ಲಿ ತೊಡಗಿರುವುದು ಅವರ ಕಣ್ಣಿಗೆ ಕಾಣಿಸುತ್ತಿಲ್ಲ. ಆ ಬಗ್ಗೆ ಯಾರು ಮಾತನಾಡುವುದಿಲ್ಲ ಎಂದರು.

ಭ್ರಷ್ಟಾಚಾರ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಜೈಲಿಗೆ ಹೋಗಿದ್ದರು. ಜೈಲಿಗೆ ಹೋಗಿ ಬಂದವರನ್ನೆಲ್ಲ ಬಿಜೆಪಿ ಪುನಃ ಪಕ್ಷಕ್ಕೆ ಸೇರಿಸಿಕೊಳ್ಳುತ್ತದೆ ಎಂದು ವ್ಯಂಗ್ಯವಾಡಿದರು. ಭ್ರಷ್ಟಾಚಾರ ಆರೋಪದ ಮೇಲೆ ಜೈಲು ಸೇರಿರುವವರು ಎಂದಿಗೂ ವಾಪಸ್ ಬರಲ್ಲ ಎಂದು ಮಾಜಿ ಸಚಿವ ಗಾಲಿ ಜನಾರ್ಧನ್ ರೆಡ್ಡಿ ವಿರುದ್ಧ ಪರೋಕ್ಷ ದಾಳಿ ನಡೆಸಿದರು. ಅಲ್ಲದೆ ಕರ್ನಾಟಕದಲ್ಲಿ ಬಿಜೆಪಿಯ ಭ್ರಷ್ಟಾಚಾರ ಹೊರತೆಗೆಯಲು ಯುಪಿಎ ಸರ್ಕಾರ ಜಾರಿಗೆ ತಂದಿರುವ ಆರ್‌ಟಿಐನಿಂದ ಸಾಧ್ಯವಾಯಿತು ಎಂದರು.

ದೇಶದ ಜನತೆಯ ಅಭಿವೃದ್ದಿಗಾಗಿ ಕಾಂಗ್ರೆಸ್ ಉತ್ತಮ ಕೆಲಸಗಳನ್ನು ಮಾಡುತ್ತಾ ಬಂದಿದೆ. ಕಾಂಗ್ರೆಸ್ ಜನಪರ ಸರ್ಕಾರವಾಗಿದ್ದು, ಬಡವರಿಗೆ ಆರೋಗ್ಯದ ಹಕ್ಕ ಹಾಗೂ ಸ್ವಂತ ಸೂರಿನ ಹಕ್ಕು ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದೆ ಎಂದರು. ಅದೇ ರೀತಿ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಸರ್ಕಾರವಧಿಯಲ್ಲಿ ಕರ್ನಾಟಕದಲ್ಲಿ ಉತ್ತಮ ಅಭಿವೃದ್ಧಿ ಕೆಲಸಗಳು ಆಗಿವೆ. ಹಾಗೇ ಕರ್ನಾಟಕವನ್ನು ಮತ್ತಷ್ಟು ಅಭಿವೃದ್ಧಿಗೊಳಿಸಲು ಎಲ್ಲಾ ಕಾಂಗ್ರೇಸಿಗರು ಒಟ್ಟಾಗಿ ಹೋಗಬೇಕು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement