ಅನಂತಮೂರ್ತಿ ವಿರುದ್ಧ ಆಯೋಗಕ್ಕೆ ದೂರು
ಲೋಕಸಭೆ ಚುನಾವಣೆಯಲ್ಲಿ ತಾವು ಕಾಂಗ್ರೆಸ್‌ನ್ನು ಬೆಂಬಲಿಸುವುದಾಗಿ ಹೇಳಿದ್ದ ಜ್ಞಾನಪೀಠ..
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ತಾವು ಕಾಂಗ್ರೆಸ್‌ನ್ನು ಬೆಂಬಲಿಸುವುದಾಗಿ ಹೇಳಿದ್ದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ.ಯು.ಆರ್.ಅನಂತಮೂರ್ತಿ ಅವರ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಬಿಜೆಪಿ ನಾಯಕಿ ಹಾಗೂ ಚಿತ್ರನಟಿ ಮಾಳವಿಕಾ ಮತ್ತು ಪ್ರಕಾಶ್ ಅವರು ಅನಂತಮೂರ್ತಿ ವಿರುದ್ಧ ಇಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಅನಂತಮೂರ್ತಿ ಅವರು ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದು, ಅವರು ಸರ್ಕಾರಿ ಹುದ್ದೆಯಲ್ಲಿದ್ದುಕೊಂಡು ಕಾಂಗ್ರೆಸ್ ಪರ ಪ್ರಚಾರ ಮಾಡುವುದು ಸರಿಯಲ್ಲ ಎಂದು ದೂರಿದ್ದಾರೆ.
ಅನಂತಮೂರ್ತಿ ಅವರು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು ಕೋಮುವಾದಿ ಎನ್ನುತ್ತಿದ್ದಾರೆ. ಅಲ್ಲದೆ ಬಹಿರಂಗವಾಗಿಯೇ ಅವರು ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಿದ್ದು, ಇದು ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಎಂದು ಬಿಜೆಪಿ ಆರೋಪಿಸದೆ.
ಕಳೆದ ಗುರುವಾರ ಕೆಲ ಸಾಹಿತಿಗಳೊಂದಿಗೆ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಅನಂತಮೂರ್ತಿ, ನರೇಂದ್ರ ಮೋದಿ ದೇಶದ ಪ್ರಧಾನಿಯಾದರೆ ಭಾರತದಲ್ಲಿ ಸರ್ವಾಧಿಕಾರ ಸೃಷ್ಟಿಯಾಗುತ್ತದೆ ಎಂದು ಆರೋಪಿಸಿದ್ದರು. ಅಲ್ಲದೆ ಚುನಾವಣೆಯಲ್ಲಿ ತಾವು ಕಾಂಗ್ರೆಸ್ ಬೆಂಬಲಿಸುವುದಾಗಿ ಬಹಿರಂಗವಾಗಿಯೇ ಘೋಷಿಸಿದ್ದರು.