ರಾಜ್ಯದ ಸಮಸ್ಯೆಗಳ ಬಗ್ಗೆ ಮಾತನಾಡದ ಮೋದಿಗ್ಯಾಕೆ ಮತ? ಎಚ್‌ಡಿಕೆ ಪ್ರಶ್ನೆ
ರಾಜ್ಯದ ಸಮಸ್ಯೆಗಳ ಬಗ್ಗೆ ಮಾತನಾಡದ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗೆ ಏಕೆ ಮತ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ..
ಶಿವಮೊಗ್ಗ: ರಾಜ್ಯದ ಸಮಸ್ಯೆಗಳ ಬಗ್ಗೆ ಮಾತನಾಡದ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗೆ ಏಕೆ ಮತ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಗಳವಾರ ಪ್ರಶ್ನಿಸಿದ್ದಾರೆ.
ಇಂದು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಬಿಜೆಪಿ ನಾಯಕರು ಮೋದಿ ಹೆಸರಿನಲ್ಲಿ ಮತಯಾಚನೆ ಮಾಡುತ್ತಿದ್ದಾರೆ. ಆದರೆ ಮೋದಿ ಅವರು ರಾಜ್ಯದ ಸಮಸ್ಯೆಗಳ ಬಗ್ಗೆ ಯಾವುದೇ ಪ್ರಸ್ತಾಪ ಮಾಡುತ್ತಿಲ್ಲ. ಹೀಗಾಗಿ ರಾಜ್ಯದ ಜನ ಮೋದಿಗೆ ಏಕೆ ಮತ ನೀಡಬೇಕು ಎಂದು ಪ್ರಶ್ನಿಸಿದರು.
ಇನ್ನು ಕಾಂಗ್ರೆಸ್‌ನವರು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಕರೆತಂದು ಪ್ರಚಾರ ಮಾಡುತ್ತಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ರಾಹುಲ್ ಗಾಂಧಿ ರಾಜ್ಯ ಸರ್ಕಾರದ ವೈಫಲ್ಯಗಳ ಬಗ್ಗೆ ಏಕೆ ಮಾತನಾಡುತ್ತಿಲ್ಲ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
ಇದೇ ವೇಳೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ ಎಚ್‌ಡಿಕೆ, ಯಡಿಯೂರಪ್ಪ ವಿರುದ್ಧ ದುಡ್ಡಿನಲ್ಲಿ ಸ್ಪರ್ಧೆ ಮಾಡಲು ಆಗುವುದಿಲ್ಲ. ಆದರೆ ಮತದಲ್ಲಿ ಜೆಡಿಎಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಅವರು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಎರಡು ದಿನದಲ್ಲಿ ಜೆಡಿಎಸ್ ಪ್ರಣಾಳಿಕೆ ಬಿಡುಗಡೆ
ಲೋಕಸಭೆ ಚುನಾವಣೆಗಾಗಿ ಇನ್ನು ಎರಡು ದಿನದಲ್ಲಿ ಜೆಡಿಎಸ್ ಪ್ರಣಾಳಿಕೆ ಬಿಡುಗಡೆ ಮಾಡುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.