ವರ್ಗಾವಣೆ ಆದೇಶ ಮರು ಪರಿಶೀಲಿಸಿ: ಆಯೋಗಕ್ಕೆ ಮಮತಾ ಮನವಿ
ಚುನಾವಣಾ ಆಯೋಗದ ವಿರುದ್ಧ ಗರಂ ಆಗಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ..
ಕೋಲ್ಕತಾ: ಚುನಾವಣಾ ಆಯೋಗದ ವಿರುದ್ಧ ಗರಂ ಆಗಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈಗ ಸ್ವಲ್ಪ ತಣ್ಣಗಾಗಿದ್ದು, ಅಧಿಕಾರಿಗಳ ವರ್ಗಾವಣೆ ಆದೇಶವನ್ನು ಮರು ಪರಿಶೀಲಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.
ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, 8 ಅಧಿಕಾರಿಗಳ ವರ್ಗಾವಣೆ ಆದೇಶವನ್ನು ಮರು ಪರಿಶೀಲಿಸುವಂತೆ ಒತ್ತಾಯಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ನಿನ್ನೆಯಷ್ಟೆ ಚುನಾವಣಾ ಆಯೋಗ ಐವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಓರ್ವ ಜಿಲ್ಲಾಧಿಕಾರಿ ಸೇರಿದಂತೆ 8 ಅಧಿಕಾರಿಗಳ ವರ್ಗಾವಣೆ ಮಾಡುವಂತೆ ಆದೇಶಿಸಿತ್ತು. ಆದರೆ ಆಯೋಗದ ಆದೇಶವನ್ನು ತಳ್ಳಿಹಾಕಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಾವು ಯಾವುದೇ ಕಾರಣಕ್ಕೂ ಅಧಿಕಾರಿಗಳ ವರ್ಗಾವಣೆ ಮಾಡುವುದಿಲ್ಲ ಮತ್ತು ಈ ಸಂಬಂಧ ತಾವು ಜೈಲಿಗೆ ಹೋಗಲು ಸಿದ್ಧ ಎಂದಿದ್ದರು.
ಮಮತಾ ಅವರ ಈ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಆಯೋಗ, ಒಂದು ವೇಳೆ ಪಶ್ಚಿಮ ಬಂಗಾಳ ಸರ್ಕಾರ ವರ್ಗಾವಣೆ ಆದೇಶವನ್ನು ರದ್ದುಗೊಳಿಸಿದ್ದೇಯಾದರೆ, ಸಂಬಂಧಿಸಿದ ಜಿಲ್ಲೆಗಳಲ್ಲಿ ಚುನಾವಣೆಯನ್ನು ರದ್ದುಗೊಳಿಸುವ ತೀರ್ಮಾನಕ್ಕೆ ಬಂದಿತ್ತು ಎನ್ನಲಾಗಿದೆ.