ಮೋದಿ ವಿರುದ್ಧ ಆಯೋಗಕ್ಕೆ ಕಾಂಗ್ರೆಸ್ ದೂರು
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಚುನಾವಣಾ ಆಯೋಗಕ್ಕೆ...
ನವದೆಹಲಿ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಚುನಾವಣಾ ಆಯೋಗಕ್ಕೆ 2012ರವರೆಗೂ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಶುಕ್ರವಾರ ದೂರು ನೀಡಿದೆ.
ಮೋದಿ ವಿವಾಹವಾಗಿದ್ದನ್ನು ಇಷ್ಟು ದಿನ ಮುಚ್ಚಿಟ್ಟಿದ್ದರು. ಈ ಹಿಂದೆ ಸಲ್ಲಿಸಿದ್ದ ನಾಮಪತ್ರಗಳಲ್ಲಿ ಸುಳ್ಳು ಮಾಹಿತಿ ನೀಡುತ್ತಾ ಬಂದಿದ್ದಾರೆ. ಮೋದಿ ಅವರು ಚುನಾವಣಾ ಆಯೋಗದ ನೀತಿ ಸಂಹಿತೆಯಂತೆ ನಾಮಪತ್ರ ಸಲ್ಲಿಸದೆ ಅಪರಾಧ ಏಸಗಿದ್ದಾರೆ ಎಂದು ಆರೋಪಿಸಿರುವ ಕೇಂದ್ರ ಕಾನೂನು ಸಚಿವ ಕಪಿಲ್ ಸಿಬಲ್ ಅವರು ಆಯೋಗಕ್ಕೆ ದೂರು ನೀಡಿದ್ದಾರೆ.
2012ರವರೆಗೂ ವಿಧಾನಸಭೆ ಚುನಾವಣೆಗಳಲ್ಲಿ ಮೋದಿ ಅವರು, ನಾಮಪತ್ರದಲ್ಲಿ ವಿವಾಹಕ್ಕೆ ಸಂಬಂಧಿಸಿದ ಕಾಲಂನ್ನು ಖಾಲಿ ಬಿಡುತ್ತಿದ್ದರು ಇದು ನೀತಿ ಸಂಹಿತೆ ಉಲ್ಲಂಘನೆ ಎಂದು ಕಪಿಲ್ ಸಿಬಲ್ ಆರೋಪಿಸಿದ್ದಾರೆ.
ಗುಜರಾತ್ನ ವಡೋದರಾ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ನರೇಂದ್ರ ಮೋದಿ ಇತ್ತೀಚೆಗಷ್ಟೇ ನಾಮಪತ್ರ ಸಲ್ಲಿಸಿದ್ದರು. ಇದರಲ್ಲಿ ತಾವು ಗೃಹಸ್ಥ. ನಾನು ಜಶೋದಾಬೇನ್ ಎಂಬುವರನ್ನು ವಿವಾಹವಾಗಿರುವುದಾಗಿ ನಮೂದಿಸಿದ್ದರು. ಇದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.