ಬಿಜೆಪಿ 276 ಕ್ಷೇತ್ರಗಳಲ್ಲಿ ಗೆದ್ದರೆ ರಾಜಕೀಯ ನಿವೃತ್ತಿ: ದೇವೇಗೌಡ
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 276 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದೆಯಾದರೆ..
ಶಿವಮೊಗ್ಗ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 276 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದೆಯಾದರೆ ತಾವು ರಾಜಕೀಯದಿಂದ ನಿವೃತ್ತಿ ಪಡೆಯುವುದಾಗಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಶನಿವಾರ ಹೇಳಿದ್ದಾರೆ.
ಇಂದು ಶಿವಮೊಗ್ಗ ಜೆಡಿಎಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಪರ ಪ್ರಚಾರ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಪ್ರಧಾನಿ, ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು.
ದೇಶದಲ್ಲಿ ನರೇಂದ್ರ ಮೋದಿ ಅಲೆ ಇಲ್ಲವೇ ಇಲ್ಲ. ಆದರೆ ಬಿಜೆಪಿ ಮೋದಿ ಅಲೆ ಇದೆ ಹೇಳಿಕೊಳ್ಳುತ್ತಿದೆ ಎಂದರು. ಮೋದಿ ಈ ದೇಶದ ಪ್ರಧಾನಿಯಾಗುವುದಿಲ್ಲ. ಇದು ನನ್ನ ರಾಜಕೀಯ ಅನುಭವದ ಭವಿಷ್ಯ ಎಂದು ದೇವೇಗೌಡರು ನುಡಿದರು. ಅಲ್ಲದೆ ಒಂದು ವೇಳೆ ಮೋದಿ ಪ್ರಧಾನಿಯಾದರೆ, ತಾವು ರಾಜ್ಯದಲ್ಲೇ ಇರುವುದಿಲ್ಲ ಎಂದು ದೇವೇಗೌಡರು ಹೇಳಿದ್ದಾರೆ.