ಮೋದಿ ಮೇಲೆ ನನಗೆ ವೈಯಕ್ತಿಕ ದ್ವೇಷವಿಲ್ಲ: ರಾಹುಲ್
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಮೇಲೆ ನನಗೆ ವೈಯಕ್ತಿಕ ದ್ವೇಷವಿಲ್ಲ.
ಅಮೇಥಿ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಮೇಲೆ ನನಗೆ ವೈಯಕ್ತಿಕ ದ್ವೇಷವಿಲ್ಲ. ನಾಮಪತ್ರದಲ್ಲಿ ವಿವಾಹವಾಗಿರುವುದಾಗಿ ನಮೂದಿಸಿರುವ ಬಗ್ಗೆ ಮಾತ್ರ ನಾನು ಮಾತನಾಡಿದ್ದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಶನಿವಾರ ಸ್ಪಷ್ಟಪಡಿಸಿದ್ದಾರೆ.
ಅಮೇಥಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ರಾಹುಲ್, ನನಗೆ ಮೋದಿ ಅವರು ಮೇಲೆ ವೈಯಕ್ತಿಕವಾಗಿ ದ್ವೇಷವಿಲ್ಲ. ಮೋದಿ ಸಲ್ಲಿಸಿರುವ ನಾಮಪತ್ರದಲ್ಲಿ ವಿವಾಹವಾಗಿರುವುದಾಗಿ ತಿಳಿಸಿದ್ದು, ಈ ವರದಿಯಾದರದ ಮೇಲೆ ಈ ಹಿಂದೆ ಏಕೆ ನಾಮಪತ್ರದಲ್ಲಿ ವಿವಾಹವಾಗಿದ್ದಾಗಿ ನಮೂದಿಸಿಲ್ಲ ಎಂಬುದಾಗಿ ಮಾತನಾಡಿದ್ದೆ ಎಂದು ಹೇಳಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರದ ವೇಳೆ ರಾಹುಲ್, ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಮೋದಿ ಅವರು ಎಷ್ಟು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೋ ನನಗೆ ಗೊತ್ತಿಲ್ಲ. ಆದರೆ ಈ ಹಿಂದೆ ಅವರು ವಿಧಾನಸಭಾ ಚುನಾವಣೆಗೆ ಸಲ್ಲಿಸಿದ ನಾಮಪತ್ರದಲ್ಲಿ ಈ ಬಗ್ಗೆ ಎಲ್ಲಿಯೂ ನಮೂದಿಸಿರಲಿಲ್ಲ. ಮಹಿಳೆಯರನ್ನು ಗೌರವಿಸುವ ಅವರು ತಮ್ಮ ಪತ್ನಿ ಹೆಸರನ್ನು ಗೌಪ್ಯವಾಗಿ ಇಟ್ಟಿದ್ದು ಯಾಕೆ ಎಂದು ಪ್ರಶ್ನಿಸಿದ್ದರು.
ರಾಹುಲ್ ಹೇಳಿಕೆಗೆ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಬಿಜೆಪಿ ಹಿರಿಯ ನಾಯಕ ವೆಂಕಯ್ಯ ನಾಯ್ಡು ಅವರು, ಕಾಂಗ್ರೆಸ್ ಟೀಕೆಗಳು ಹದ್ದು ಮೀರುತ್ತಿದೆ. ಭವಿಷ್ಯದಲ್ಲಿ ಕಾಂಗ್ರೆಸ್ ಇದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಕಿಡಿಕಾರಿದ್ದರು.