ಚುನಾವಣಾ ಆಯೋಗ ಕಾಂಗ್ರೆಸ್ ಕೈಗೊಂಬೆ: ಅಜಂಖಾನ್
ಉತ್ತರ ಪ್ರದೇಶದಲ್ಲಿ ಪ್ರಚಾರ ಮಾಡದಂತೆ ಕೇಂದ್ರ...
ನವದೆಹಲಿ: ಉತ್ತರ ಪ್ರದೇಶದಲ್ಲಿ ಪ್ರಚಾರ ಮಾಡದಂತೆ ಕೇಂದ್ರ ಚುನಾವಣಾ ಆಯೋಗದಿಂದ ನಿಷೇಧಕ್ಕೆ ಒಳಗಾಗಿರುವ ಸಮಾಜವಾದಿ ಪಕ್ಷದ ಸಚಿವ ಅಜಂ ಖಾನ್, ಚುನಾವಣಾ ಆಯೋಗ ಕಾಂಗ್ರೆಸ್‌ನ ಅಣತಿಯಂತೆ ವರ್ತಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಬರೀ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗಿದ್ದ ಅಜಂಖಾನ್ ನವದೆಹಲಿಯಲ್ಲಿಂದು ಕೇಂದ್ರ ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನೋಟಿಸ್‌ಗೆ ಪ್ರತಿಕ್ರಿಯಿಸಿರುವ ಅವರು, ಚುನಾವಣಾ ಆಯೋಗ ಕಾಂಗ್ರೆಸ್‌ನ ಕೈಗೊಂಬೆಯಾಗಿದ್ದು, ಕಾಂಗ್ರೆಸ್‌ನ ಅಣತಿಯಂತೆ ವರ್ತಿಸುತ್ತಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ ದೇಶದ ಸಮಗ್ರತೆ ಎಂದರೆ ಏನು? ಇದನ್ನು ಚುನಾವಣಾ ಆಯೋಗ ಸ್ಪಷ್ಟ ಪಡಿಸಬೇಕು ಇಲ್ಲದಿದ್ದರೆ ಚುನಾವಣಾ ಆಯೋಗದ ವಿರುದ್ಧ ಕೋರ್ಟ್ ಮೆಟ್ಟಿಲೇರುವುದಾಗಿ ಹೇಳಿದ್ದಾರೆ.
ಇದೇ ವೇಳೆ, ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಆಪ್ತ ಅಮಿತ್ ಶಾರ ಹೇಳಿಕೆಯನ್ನು ಹಾಗೂ ನನ್ನ ಹೇಳಿಕೆಯನ್ನು ಒಂದೇ ತಕ್ಕಡಿಯಲ್ಲಿ ಹಾಕಿ ತೂಗಬೇಡಿ ಎಂದು ಹೇಳಿದರು.
ಉತ್ತರಪ್ರದೇಶದಲ್ಲಿ ಎಸ್‌ಪಿ ಪಕ್ಷದ ಚುನಾವಣಾ ಪ್ರಚಾರದ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಅಜಂಖಾನ್ ವಿರುದ್ಧ ಚುನಾವಣಾ ಆಯೋಗ ಕ್ರಮಕೈಗೊಂಡಿತ್ತು. ಉತ್ತರಪದೇಶದಲ್ಲಿ ಅಜಂಖಾನ್‌ರ ಸಭೆ ಸಮಾರಂಭಗಳಿಗೆ ಹಾಗೂ ಚುನಾವಣಾ ರ್ಯಾಲಿಗಳಿಗೆ ನಿಷೇಧ ಹೇರಿತ್ತು. ಅಲ್ಲದೆ ಈ ಸಂಬಂಧ ಅಜಂಖಾನ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಉತ್ತರಪ್ರದೇಶದ ಪೊಲೀಸರಿಗೆ ಆದೇಶಿಸಿತ್ತು.
ಚುನಾವಣಾ ಆಯೋಗದ ಅಣತಿಯಂತೆ ನಿನ್ನೆ ಪೊಲೀಸರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಅಜಂಖಾನ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿತ್ತು.