ಬಿಜೆಪಿ ಅಧಿಕಾರಕ್ಕೆ ಬಂದರೆ, ರಾಬರ್ಟ್ ವಾದ್ರಾ ಜೈಲಿಗೆ: ಉಮಾಭಾರತಿ
ಎನ್ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಅಧ್ಯಕ್ಷ...
ಝಾನ್ಸಿ: ಎನ್ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಜೈಲಿಗೆ ಹೋಗುವುದು ಖಚಿತ ಎಂದು ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ ಭಾನುವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಉಮಾ ಭಾರತಿ, ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಹಲವಾರು ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಅವರನ್ನು ಜೈಲಿಗೆ ಕಳಿಸಲಾಗುವುದು ಎಂದರು.
ಇದೇ ವೇಳೆ, ಉತ್ತರ ಪ್ರದೇಶ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸಮಾಜವಾದಿ ಪಕ್ಷದ ಸರ್ಕಾರ ಈ ಬಾರಿಯ ಚುನಾವಣೆಯಲ್ಲಿ ಪೊಲೀಸರ ನೆರವಿನಿಂದ ಸೀಟುಗಳನ್ನು ಗೆಲ್ಲಲು ಹವಣಿಸುತ್ತಿದೆ ಎಂದು ಉಮಾ ಭಾರತಿ ಆರೋಪಿಸಿದ್ದಾರೆ.
ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಕೇವಲ ನಾಮಕಾವಸ್ತೆ ಮುಖ್ಯಮಂತ್ರಿಯಾಗಿದ್ದು, ತಮ್ಮ ತಂದೆ ಮುಲಾಯಂ ಸಿಂಗ್ ಯಾದವ್ ಹೇಳಿದಂತೆ ಮಾಡುತ್ತಿದ್ದಾರೆ ಎಂದು ದೂರಿದರು.
ರಾಬರ್ಟ್ ವಾದ್ರಾ ವಿರುದ್ಧದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಕ್ತಾರ ಅಭಿಷೇಕ್ ಸಿಂಘ್ವಿ, ಮೊದಲು ಬಿಜೆಪಿ ಅಧಿಕಾರಕ್ಕೆ ಬರಲಿ, ಆ ನಂತರ ವಾದ್ರಾರನ್ನು ಜೈಲಿಗೆ ಕಳುಹಿಸಲಿ ಎಂದು ತಿರುಗೇಟು ನೀಡಿದ್ದಾರೆ.