ಎಸ್‌ಪಿ ಸರ್ಕಾರದ ವಿರುದ್ಧ ಸೋನಿಯಾ ವಾಗ್ದಾಳಿ
ಮೊರಾದಾಬಾದ್: ಸಮಾಜವಾದಿ ಪಕ್ಷದ ತಪ್ಪು ನಿರ್ಧಾರಗಳಿಂದ ಉತ್ತರಪ್ರದೇಶದಲ್ಲಿ ಅಭಿವೃದ್ಧಿ ಸಾಧ್ಯವಾಗಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸೋಮವಾರ ಆರೋಪಿಸಿದ್ದಾರೆ.
ಉತ್ತರಪ್ರದೇಶದ ಮೊರಾದಾಬಾದ್‌ನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಸೋನಿಯಾ, ಉತ್ತರಪ್ರದೇಶದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸಮಾಜವಾದಿ ಪಕ್ಷದ ನಿರ್ಧಾರಗಳಿಂದ ರಾಜ್ಯ ಅಭಿವೃದ್ಧಿ ಹೊಂದಲು ಸಾಧ್ಯವಾಗಿಲ್ಲ ಎಂದು ಕಿಡಿಕಾರಿದರು.
ಸಮಾಜವಾದಿ ಪಕ್ಷ ಸರ್ಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ವಿದ್ಯುತ್ ಮತ್ತು ಸಾರಿಗೆ ವ್ಯವಸ್ಥೆ ಹದಗೆಟ್ಟಿದೆ. ನಿರಂತರವಾಗಿ ವಿದ್ಯುತ್ ಪೂರೈಸುವಲ್ಲಿ ಸರ್ಕಾರ ಸೋತಿದೆ. ಅದೇ ರೀತಿ ರಾಜ್ಯದ ಕಬ್ಬು ಬೆಳೆಗಾರರು ತೀರ ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಕರಕುಶಲಕರ್ಮಿಗಳಿಗೂ ಸೂಕ್ತ ಬೆಂಬಲ ಸಿಗದೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಎಸ್‌ಪಿ ಪಕ್ಷದ ವಿರುದ್ಧ ಕಿಡಿಕಾರಿದರು.
ಇದೇ ವೇಳೆ, ಕಾಂಗ್ರೆಸ್ ನೇತೃತ್ವದ ಯುಪಿಎ-2 ಸರ್ಕಾರದ ಸಾಧನೆಗಳ ಬಗ್ಗೆ ಬರ್ಣ್ಣಿಸಿದ ಸೋನಿಯಾ, ಕಳೆದ 10 ವರ್ಷಗಳ ಅವಧಿಯಲ್ಲಿ ಯುಪಿಎ ಸರ್ಕಾರ ದೇಶದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿದೆ ಎಂದರು. ಅಲ್ಲದೆ ಜಾತ್ಯಾತೀತವಾದಕ್ಕೆ ಕಾಂಗ್ರೆಸ್ ಪಕ್ಷ ಬೆಂಬಲಿಸುತ್ತಾ ಎಲ್ಲರನ್ನೂ ಒಗ್ಗೂಡಿಸಿ ಮುನ್ನಡೆಯುತ್ತಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಪುನಃ ಅಧಿಕಾರಕ್ಕೆ ಬಂದರೆ ದೇಶದ ಯುವಕರಿಗೆ ರೋಜ್‌ಗಾರ್ ಯೋಜನೆ ಮೂಲಕ ಉದ್ಯೋಗ ನೀಡುವ ಭರವಸೆ ನೀಡಿದರು.