ಅಕ್ರಮ ಗಣಿಗಾರಿಕೆಯಲ್ಲಿ ಅಧಿಕಾರಿಗಳ ಪಾತ್ರ ಸಾಬೀತು
ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ ಹಲವು ಐಎಎಸ್ ಅಧಿಕಾರಿಗಳು ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿರುವುದು ಲೋಕಾಯುಕ್ತ..
ಬೆಂಗಳೂರು: ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ ಹಲವು ಐಎಎಸ್ ಅಧಿಕಾರಿಗಳು ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿರುವುದು ಲೋಕಾಯುಕ್ತ ವರದಿಯಿಂದ ಸಾಬೀತಾಗಿದೆ.
ಬಳ್ಳಾರಿಯ ಮೀಸಲು ಅರಣ್ಯ ಪ್ರದೇಶದಲ್ಲಿ ಕಾನೂನು ಉಲ್ಲಂಘಿಸಿ ಅಕ್ರಮವಾಗಿ ಗಣಿಗಾರಿಕೆ ನಡೆಸಿದ ಖಾಸಗಿ ಕಂಪನಿಗಳಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರು ಸಾಥ್ ನೀಡಿದ್ದು, ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಲೋಕಾಯುಕ್ತ ನಾಯಮೂರ್ತಿ ವೈ.ಭಾಸ್ಕರ್ ರಾವ್ ಅವರು ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.
ನವೆಂಬರ್ 1986ರಿಂದ ಮೇ, 2010ರವರೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ನಿರ್ದೇಶಕರಾಗಿದ್ದ ಎಲ್ಲಾ ಐಎಎಸ್ ಅಧಿಕಾರಿಗಳು, ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದ ಕುಮಾರಸ್ವಾಮಿ ಮಿನರಲ್ ಎಕ್ಸ್ಪೊರ್ಟ್ಸ್ ಕಂಪನಿಗೆ ಸಹಕರಿಸಿದ್ದಾರೆ ಎಂದು ಲೋಕಾಯುಕ್ತರು ತಮ್ಮ ವರದಿಯಲ್ಲಿ ತಿಳಿಸಿದ್ದಾರೆ.
ಸೆಕ್ಸೆನ್ 12(3) ಲೋಕಾಯುಕ್ತ ಕಾಯ್ದೆಯಡಿ ಈ ವರದಿ ಸಿದ್ಧಪಡಿಸಲಾಗಿದ್ದು, ಸತತ 24 ವರ್ಷಗಳ ಕಾಲ ಅಕ್ರಮ ಗಣಿಗಾರಿಕೆಯನ್ನು ನಿಯಂತ್ರಿಸುವಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರು ವಿಫಲವಾಗಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ. ಅಲ್ಲದೆ ಈ ಅವಧಿಯಲ್ಲಿ ಕಾರ್ಯನಿರ್ವಹಿಸಿದ ಎಲ್ಲಾ ನಿರ್ದೇಶಕರು ತಮ್ಮ ಕರ್ತವ್ಯ ಮರೆತು ಅಕ್ರಮ ಗಣಿಗಾರಿಕೆಗೆ ಸಹಕರಿಸಿದ್ದು, ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಶಿಫಾರಸು ಮಾಡಲಾಗಿದೆ. ಆದರೆ ಈ ವರದಿಯಲ್ಲಿ ಯಾವುದೇ ಅಧಿಕಾರಿಗಳ ಹೆಸರು ಪ್ರಸ್ತಾಪವಾಗಿಲ್ಲ.
ಲೋಕಾಯುಕ್ತರು ಈ ವರದಿಯೊಂದಿಗೆ ಮತ್ತೊಂದು ವರದಿಯನ್ನು ಸರ್ಕಾರಕ್ಕೆ ಕಳುಹಿಸಿದ್ದು, ಅದರಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಕಂಪನಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು ಎಂದು ಶಿಫಾರಸು ಮಾಡಲಾಗಿದೆ. ಈ ಕಂಪನಿಗಳು ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ, ಸುಮಾರು 86 ಕೋಟಿ ತೆರಿಗೆ ವಂಚಿಸಿವೆ ಎಂದು ಹೇಳಲಾಗಿದೆ.
ಮೀಸಲು ಅರಣ್ಯ ಪ್ರದೇಶದಲ್ಲಿ ಕುಮಾರಸ್ವಾಮಿ ಮಿನರಲ್ ಎಕ್ಸ್ಪೊರ್ಟ್ಸ್ ಕಂಪನಿ ಅಕ್ರಮ ಗಣಿಗಾರಿಕೆ ನಡೆಸುತ್ತಿದೆ ಎಂದು ಆರೋಪಿಸಿ ಮೇ,2010ರಲ್ಲಿ ಬಳ್ಳಾರಿ ನಿವಾಸಿ ಎಸ್.ಮೊಹಮ್ಮದ್ ತನ್ವೀರ್ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಲೋಕಾಯುಕ್ತರು ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ಸರ್ಕಾರಕ್ಕೆ ವರದಿ ನೀಡಿದ್ದು, ಮೂರು ತಿಂಗಳ ಒಳಗೆ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಅವರು, ವರದಿ ಇನ್ನು ತಮ್ಮ ಕೈ ಸೇರಿಲ್ಲ. ಅದು ಡಿಪಿಎಆರ್ಗೆ ಹೋಗಿರುವ ಸಾಧ್ಯತೆ ಎಂದಿದ್ದಾರೆ.
ನಿರ್ದೇಶಕರ ಶಿಫಾರಸು ನಿರ್ಲಕ್ಷಿಸಿದ ಸರ್ಕಾರ
ಕುಮಾರಸ್ವಾಮಿ ಮಿನರಲ್ ಎಕ್ಸ್ಪೊರ್ಟ್ಸ್ ಕಂಪನಿಯ ಗಣಿ ಲೀಸ್ ಅನ್ನು ರದ್ದುಗೊಳಿಸಬೇಕು ಎಂದು ಜುಲೈ 18, 2013ರಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕ ಆರ್. ಶ್ರೀನಿವಾಸ್ ಅವರು ಸರ್ಕಾರಕ್ಕೆ ಶಿಫಾರಸು ಮಾಡಿದ್ದರು. ಆದರೆ ಈ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ.