ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

'ಮೈತ್ರಿ ಮರ್ಮ ಅರಿಯುವಲ್ಲಿ ಪ್ರಧಾನಿ ಸಿಂಗ್ ವಿಫಲ'

ಕೇಂದ್ರ ಸಚಿವ ಶ್ರೀ ಪ್ರಕಾಶ್ ಜೈಸ್ವಾಲ್ ಹೇಳಿಕೆ

Srinivasa Murthy VN
Updated On : 22 Apr 2014, 4:06 am

ನವದೆಹಲಿ: ಪ್ರಧಾನಿ ಮನಮೋಹನ್ ಸಿಂಗ್ ಅವರು ಮೈತ್ರಿ ಸರ್ಕಾರದ ಮರ್ಮ ಅರಿಯುವಲ್ಲಿ ವಿಫಲರಾಗಿದ್ದು, ಅದರ ಪರಿಣಾಮವನ್ನು ಈಗ ಎದುರಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಶ್ರೀ ಪ್ರಕಾಶ್ ಜೈಸ್ವಾಲ್ ಹೇಳಿದ್ದಾರೆ.

ನವದೆಹಲಿಯಲ್ಲಿ ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿರುವ ಕೇಂದ್ರ ಸಚಿವ ಶ್ರೀ ಪ್ರಕಾಶ್ ಜೈಸ್ವಾಲ್ ಅವರು, ಪ್ರಧಾನಿ ಮನಮೋಹನ್ ಸಿಂಗ್ ಮೈತ್ರಿ ಸರ್ಕಾರದ ಮರ್ಮ ಅರಿಯುವಲ್ಲಿ ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.

ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಕ್ರಿಯರಾಗಿ ಭಾಗವಹಿಸುತ್ತಿಲ್ಲ ಏಕೆ? ಎಂಬ ಪ್ರಶ್ನೆಗೆ ಉತ್ತರಿಸಿದ ಜೈಸ್ವಾಲ್ ಅವರು, ಪ್ರಧಾನಿ ಮನಮೋಹನ್ ಸಿಂಗ್ ಅವರ ಆಡಳಿತದ ವಿರುದ್ಧ ಹಲವು ಟೀಕೆಗಳು ವ್ಯಕ್ತವಾಗುತ್ತಿವೆ. ಆದರೆ ಮನಮೋಹನ್ ಸಿಂಗ್ ಅವರು ರಾಜಕಾರಣಿ ಅಲ್ಲ. ಹೀಗಾಗಿ ಅವರು ಮೈತ್ರಿ ಸರ್ಕಾರದ ರಾಜಕೀಯ ತಿರುವುಗಳನ್ನು ಅರಗಿಸಿಕೊಳ್ಳುವುದರಲ್ಲಿ ವಿಫಲರಾಗಿದ್ದು, ಅದರ ವ್ಯತಿರಿಕ್ತ ಪರಿಣಾಮವನ್ನು ಎದುರಿಸುವಂತಾಗಿದೆ ಎಂದು ಹೇಳಿದ್ದಾರೆ.

ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಹೇಳಿಕೆ ನೀಡಿದ್ದ ಕಲ್ಲಿದ್ದಲು ಖಾತೆಯ ಮಾಜಿ ಕಾರ್ಯದರ್ಶಿ ಪಿಸಿ ಪಾರಖ್ ಅವರು, ಅಕ್ರಮ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಪ್ರಕ್ರಿಯೆಯಲ್ಲಿ ಪಟ್ಟಭದ್ರ ಹಿತಾಸಕ್ತಿಗಳನ್ನು ದೂರವಿಡುವಲ್ಲಿ ಪ್ರಧಾನಿ ಸಿಂಗ್ ವಿಫಲರಾಗಿದ್ದರು. ಇದರಿಂದ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ಭಾರಿ ಪ್ರಮಾಣದ ನಷ್ಟವಾಗಿದೆ ಎಂದು ಟೀಕಿಸಿದ್ದರು.

ಅಂತೆಯೇ ಈ ಹಿಂದೆ ಪ್ರಧಾನಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿದ್ದ ಸಂಜಯ ಬಾರು ಅವರು, ಇತ್ತೀಚೆಗೆ ಬಿಡುಗಡೆ ಮಾಡಿದ್ದ ಪುಸ್ತಕದಲ್ಲಿ ಕೂಡ ಸಿಂಗ್ ಆಡಳಿತ ಕಾರ್ಯ ವೈಖರಿಯನ್ನು ಟೀಕಿಸಿದ್ದರು. ಅಲ್ಲದೆ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದರೂ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಅಧಿಕಾರ ನಡೆಸುತ್ತಿದ್ದರು ಎಂಬ ಹೇಳಿಕೆ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ತೀವ್ರ ಮುಜುಗರಕ್ಕೀಡು ಮಾಡಿತ್ತು.

ಈ ಎಲ್ಲ ಕಾರಣಗಳಿಂದಾಗಿಯೇ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಕ್ರಿಯರಾಗಿಲ್ಲ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement