ಕಾಂಗ್ರೆಸ್ ನಾಯಕರಿಗೆ ಪಕ್ಷವನ್ನು ಮುನ್ನಡೆಸಲು ಸಾಧ್ಯವಾಗುತ್ತಿಲ್ಲ: ಜೇಟ್ಲಿ
ನವದೆಹಲಿ: ಲೋಕಸಭಾ ಸ್ಪೀಕರ್ ವಿರುದ್ಧ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಕ್ಕೆ ತಿರುಗೇಟು ನೀಡಿರುವ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು, ಕಾಂಗ್ರೆಸ್ ಮುಖಂಡರಿಗೆ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸಲು ಆಗುತ್ತಿಲ್ಲ ಎಂದು ಟೀಕಿಸಿದ್ದಾರೆ.
ನವದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅರುಣ್ ಜೇಟ್ಲಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿರುವ ಕಾಂಗ್ರೆಸ್ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸಲು ಯಾವುದೇ ಹಿರಿಯ ನಾಯಕರಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಂಸತ್ ಅಧಿವೇಶನಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದರು.
ಪಕ್ಷವನ್ನು ಸಮರ್ಥವಾಗಿ ಮುನ್ನಡೆಸಲು ಸಾಧ್ಯವಾಗದ ಕಾಂಗ್ರೆಸ್ ನಾಯಕರಿಗೆ ಆತ್ಮಾವಲೋಕನ ಮಾಡಿಕೊಳ್ಳಲು ಇದೊಂದು ಸುಸಮಯ ಎಂದು ತಿಳಿಸಿದ್ದಾರೆ.
ರಾಹುಲ್ ಗಾಂಧಿಯ ಆರೋಪ ಇರುವುದು ಬಿಜೆಪಿ ವಿರುದ್ಧವಲ್ಲ ಅದು ಸ್ವಂತ ಪಕ್ಷದ ಸಂಸದರ ವಿರುದ್ಧ. ಲೋಕಸಭೆಯ ಪ್ರತಿಯೊಂದು ಅಧಿವೇಶನದ ವೇಳೆ ಕಾಂಗ್ರೆಸ್ ಸಂಸದರು ವಿನಾಃ ಕಾರಣ ಗದ್ದಲ ಎಬ್ಬಿಸುತ್ತಿರುತ್ತಾರೆ ಹೀಗಾಗಿ ರಾಹುಲ್ಗೆ ಸದನದಲ್ಲಿ ಮಾತನಾಡಲು ಅವಕಾಶ ಇಲ್ಲದಿರುವುದೇ ಅವರ ಆರೋಪಕ್ಕೆ ಕಾರಣವಾಗಿದೆ ಎಂದು ಲೇವಡಿ ಮಾಡಿದರು.