ಶೀಲಾ ದಿಕ್ಷಿತ್ ವಿರುದ್ಧ ಎಫ್‌ಐಆರ್‌ಗೆ ಆಪ್ ಆದೇಶ
ಪ್ರತಿಪಕ್ಷ ಬಿಜೆಪಿಯ ಒತ್ತಡಕ್ಕೆ ಮಣಿದಿರುವ ಆಮ್ ಆದ್ಮಿ ಸರ್ಕಾರ ಕಾಮನ್ವೆಲ್ತ್ ಗೇಮ್ಸ್ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದಿಕ್ಷಿತ್ ..
ನವದೆಹಲಿ: ಪ್ರತಿಪಕ್ಷ ಬಿಜೆಪಿಯ ಒತ್ತಡಕ್ಕೆ ಮಣಿದಿರುವ ಆಮ್ ಆದ್ಮಿ ಸರ್ಕಾರ ಕಾಮನ್ವೆಲ್ತ್ ಗೇಮ್ಸ್ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದಿಕ್ಷಿತ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಗುರವಾರ ದೆಹಲಿ ಪೊಲೀಸರಿಗೆ ಆದೇಶಿಸಿದೆ.
ಹಗರಣಕ್ಕೆ ಸಂಬಂಧಿಸಿದ ಕಡತಗಳನ್ನು ಭ್ರಷ್ಟಾಚಾರ ನಿಗ್ರಹ ಪಡೆಗೆ ರವಾನಿಸಿರುವ ದೆಹಲಿ ಸರ್ಕಾರ, ಶೀಲಾ ದಿಕ್ಷಿತ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಸೂಚಿಸಿದೆ.
ಭ್ರಷ್ಟಾಚಾರ ನಿಗ್ರಹ ಪಡೆ ದೆಹಲಿ ಮಾಜಿ ಸಿಎಂ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಿದೆ. ಅಗತ್ಯ ಬಿದ್ದರೆ ಶೀಲಾ ದಿಕ್ಷಿತ್ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆಯೂ ಇದೆ.
ಈ ಸಂಬಂಧ ಕಳೆದ ಸೋಮವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಪತ್ರ ಬರೆದು, ಶೀಲಾ ದಿಕ್ಷಿತ್ ವಿರುದ್ಧ ತನಿಖೆಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದರು.
ಶೀಲಾ ದಿಕ್ಷಿತ ಸೇರಿದಂತೆ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಇತರೆ ಕಾಂಗ್ರೆಸ್ ನಾಯಕರು ವಿರುದ್ಧವೂ ತನಿಖೆ ನಡೆಸುವುದಾಗಿ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಆಮ್ ಆದ್ಮಿ ಸರ್ಕಾರ ಹೇಳಿತ್ತು. ಇದನ್ನೆ ಅಸ್ತ್ರವಾಗಿ ಬಳಸಿಕೊಂಡ ಬಿಜೆಪಿ ಕಾಂಗ್ರೆಸ್ ನಾಯಕರ ವಿರುದ್ಧ ತನಿಖೆಗೆ ಒತ್ತಡ ಹೇರಿತ್ತು.