ಲೋಕಸಭಾ ಚುನಾವಣೆ ಕಾಂಗ್ರೆಸ್ ಪಕ್ಷಕ್ಕೆ ಸವಾಲು: ಸಿದ್ದು
ಮುಂಬರುವ ಲೋಕಸಭಾ ಚುನಾವಣೆ ಕಾಂಗ್ರೆಸ್ ಪಕ್ಷಕ್ಕೆ ಒಂದು ಸವಾಲು, ಇದರಲ್ಲಿ ಪಕ್ಷ ಜಯ ಗಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ತುಮಕೂರು: ಮುಂಬರುವ ಲೋಕಸಭಾ ಚುನಾವಣೆ ಕಾಂಗ್ರೆಸ್ ಪಕ್ಷಕ್ಕೆ ಒಂದು ಸವಾಲು, ಇದರಲ್ಲಿ ಪಕ್ಷ ಜಯ ಗಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತುಮಕೂರಿನಲ್ಲಿ ಕಾಂಗ್ರೆಸ್ ಮಹಿಳಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವುದೇ ನಮ್ಮ ಗುರಿ ಆ ನಿಟ್ಟಿನಲ್ಲಿ ಕಾಂಗ್ರೆಸ್ ಯಶಸ್ವಿಯಾಗಲಿದೆ ಎಂದರು. ಅಲ್ಲದೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳಿಗೆ ಉಳಿಗಾಲವಿಲ್ಲ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.
ಕೇಂದ್ರದಲ್ಲಿ ಬಿಜೆಪಿ 6 ವರ್ಷಗಳ ಕಾಲ ಅಧಿಕಾರ ನಡೆಸಿತು. ಈ ಅವಧಿಯಲ್ಲಿ ಬಿಜೆಪಿ ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ಮಹತ್ವ ನೀಡಲಿಲ್ಲ. ಅಲ್ಲದೆ ಮಹಿಳಾ ಮೀಸಲಾತಿ ಮತ್ತು ಮಹಿಳಾ ಅಭಿವೃದ್ಧಿ ಕಾರ್ಯಗಳಿಗೆ ಬಿಜೆಪಿ ಒತ್ತು ನೀಡಲಿಲ್ಲ ಎಂದು ಸಿಎಂ ಸಿದ್ದು ಆರೋಪಿಸಿದ್ದಾರೆ.
ಕಾಂಗ್ರೆಸ್ ಮಹಿಳೆಯರಿಗೆ ಹೆಚ್ಚಿನ ಅಧಿಕಾರ ನೀಡಿದೆ. ಅಲ್ಲದೆ ಮಹಿಳೆಯ ಅಭಿವೃಧ್ಧಿಗಾಗಿ ಹಲವು ಕಾರ್ಯಕ್ರಮಗಳನ್ನು ರೂಪಿಸಿದೆ. ದೇಶದಲ್ಲಿ ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿವೆ. ಇದಕ್ಕಾಗಿ ಮಹಿಳಾ ಮೇಲಿನ ದೌರ್ಜನ್ಯಗಳ ತಡೆಗೆ ಕ್ರಮ ಕೈಗೊಳ್ಳಲಾಗಿದ್ದು, ಪ್ರಕರಣಗಳನ್ನು ತ್ವರಿತ ಗತಿಯಲ್ಲಿ ಪರಿಹರಿಸುವುದ್ದಕ್ಕಾಗಿ ರಾಜ್ಯಾದ್ಯಂತ ತ್ವರಿತ ಕೋರ್ಟ್‌ಗಳ ಸ್ಥಾಪನೆ ಮಾಡಲಾಗುವುದು ಎಂದರು.