ಲೋಕಸಮರ: ಸ್ಪರ್ಧೆಗೆ 'ಕೈ' ಸಚಿವರ ಹಿಂದೇಟು
ಮುಂದಿನ ತಿಂಗಳು ಘೋಷಣೆಯಾಗಲಿರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಹೆಚ್ಚಿನ ಸ್ಥಾನ ಗೆಲ್ಲಬೇಕು ಎಂಬ ಹಠಕ್ಕೆ ಬಿದ್ದಿರುವ ಆಡಳಿತಾರೂಢ ಕಾಂಗ್ರೆಸ್ ..
ಬೆಂಗಳೂರು: ಮುಂದಿನ ತಿಂಗಳು ಘೋಷಣೆಯಾಗಲಿರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಹೆಚ್ಚಿನ ಸ್ಥಾನ ಗೆಲ್ಲಬೇಕು ಎಂಬ ಹಠಕ್ಕೆ ಬಿದ್ದಿರುವ ಆಡಳಿತಾರೂಢ ಕಾಂಗ್ರೆಸ್ ಕೆಲವು ಕ್ಷೇತ್ರಗಳಲ್ಲಿ ತನ್ನ ಹಾಲಿ ಸಚಿವರನ್ನೇ ಕಣಕ್ಕೀಳಿಸಲು ಕಾರ್ಯತಂತ್ರ ರೂಪಿಸುತ್ತಿದೆ. ಆದರೆ ಇದಕ್ಕೆ ಸಚಿವರು ಹಿಂದೇಟು ಹಾಕುತ್ತಿರುವುದರಿಂದ ರಾಜ್ಯ ಕಾಂಗ್ರೆಸ್ ಮುಖಂಡರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಬಿಜೆಪಿ ಪ್ರಭಾವಿ ನಾಯಕ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ರಮೇಶ ಕತ್ತಿ ವಿರುದ್ಧ ಸಕ್ಕರೆ ಸಚಿವ ಪ್ರಕಾಶ್ ಹುಕ್ಕೇರಿ ಅವರನ್ನು ಹಾಗೂ ಪ್ರತಿಷ್ಠಿತ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕೃಷಿ ಸಚಿವ ಕೃಷ್ಣ ಬೈರೇಗೌಡ ಅವರನ್ನು ಕಣಕ್ಕೀಳಿಸಲು ಕಾಂಗ್ರೆಸ್ ಮುಖಂಡರು ಯತ್ನಿಸುತ್ತಿದ್ದಾರೆ.
ಇನ್ನು ಚಿತ್ರದುರ್ಗ ಮೀಸಲು ಕ್ಷೇತ್ರದಲ್ಲಿ ಅರ್ಹ ಅಭ್ಯರ್ಥಿಗಳ ಕೊರತೆ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೆಯ ಅವರನ್ನು ಕಣ್ಣಕ್ಕೀಳಿಸುವ ಚಿಂತನೆ ನಡೆದಿದೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಪ್ರಭಾವಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮಣಿಸಲು ಪ್ರಬಲ ಅಭ್ಯರ್ಥಿಯ ಹುಡುಕಾಟದಲ್ಲಿರುವ ಕಾಂಗ್ರೆಸ್, ವಿಧಾನಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರನ್ನೇ ಅಭ್ಯರ್ಥಿ ಮಾಡಲು ಮುಂದಾಗಿದೆ. ಜೆಡಿಎಸ್ ಸಹ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಕುಟುಂಬದ ಸದಸ್ಯರಲ್ಲಿ ಒಬ್ಬರನ್ನು ಕಣಕ್ಕೀಳಿಸಲು ಉದ್ದೇಶಿಸಿದೆ. ಹೀಗಾಗಿ ಈಡೀಗ ಸಮಾಜದ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಅವರಿಗೆ ಟಿಕೆಟ್ ನೀಡುವುದು ಸೂಕ್ತ ಎಂಬ ಅಭಿಪ್ರಾಯ ಕಾಂಗ್ರೆಸ್ ಪಕ್ಷದ ವಲಯದಲ್ಲಿ ಕೇಳಿ ಬರುತ್ತಿದೆ.
ಆದರೆ ಚುನಾವಣೆಗೆ ಸ್ಪರ್ಧಿಸಲು ಸ್ಪೀಕರ್ ಕಾಗೋಡು ತಿಮ್ಮಪ್ಪ ಹಾಗೂ ಸಚಿವರಾದ ಕೃಷ್ಣ ಬೈರೇಗೌಡ, ಎಚ್.ಆಂಜನೆಯ ಸುತಾರಾಂ ಒಪ್ಪುತ್ತಿಲ್ಲ. ಆಂಜನೆಯ ಅವರು ಚುನಾವಣೆಯಲ್ಲಿ ಸ್ಪರ್ಧಿಸುವುದರಿಂದ ತಪ್ಪಿಸಿಕೊಳ್ಳಲು ಹಾಗೂ ಈ ವಿಚಾರದಲ್ಲಿ ಹೈಕಮಾಂಡ್ ಮನವೊಲಿಸಲು ದೆಹಲಿಗೆ ತೆರಳಿದ್ದಾರೆ.
ಇನ್ನು ಸಚಿವ ಪ್ರಕಾಶ್ ಹುಕ್ಕೇರಿ ಅವರು ಚಿಕ್ಕೋಡಿ ಕ್ಷೇತ್ರದಲ್ಲಿ ತಮ್ಮ ಬದಲಿಗೆ ತಮ್ಮ ಪುತ್ರನಿಗೆ ಟಿಕೆಟ್ ನೀಡುವಂತೆ ಪಕ್ಷದ ಮುಖಂಡರ ಮೇಲೆ ಒತ್ತಡ ಹೇರುತ್ತಿದ್ದಾರೆ.
ಈ ಮಧ್ಯೆ ಕಾರವಾರ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಪುತ್ರರಿಗೆ ಟಿಕೆಟ್ ಕೊಡಿಸಲು ರಾಜಸ್ಥಾನ ರಾಜ್ಯಪಾಲೆ ಮಾರ್ಗರೆಟ್ ಆಳ್ವ ಹಾಗೂ ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಅವರು ಪ್ರಯತ್ನ ನಡೆಸಿದ್ದಾರೆ. ಅದೇ ರೀತಿ ತುಮಕೂರು ಕ್ಷೇತ್ರದಲ್ಲಿ ತಮ್ಮ ಪುತ್ರರಿಗೆ ಟಿಕೆಟ್ ಕೊಡಿಸಲು ಕಾನೂನು ಸಚಿವ ಟಿ.ಬಿ.ಜಯಚಂದ್ರ ಹಾಗೂ ಮಧುಗಿರಿ ಕ್ಷೇತ್ರದ ಶಾಸಕ ಕೆ.ಎನ್.ರಾಜಣ್ಣ ಅವರು ಹೋರಾಟ ನಡೆಸಿದ್ದಾರೆ.
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸೂತ್ರದಂತೆ ಮಂಗಳೂರು ಮತ್ತು ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಆಂತರಿಕ ಚುನಾವಣೆ ನಡೆಸಬೇಕು ಎಂಬ ನಿರ್ಧಾರ ರಾಜ್ಯ ಕಾಂಗ್ರೆಸ್ ಮುಖಂಡರಿಗೆ ದೊಡ್ಡ ತಲೆನೋವಾಗಿ ಪರಿಣಿಮಿಸಿದೆ. ಮಂಗಳೂರು ಕ್ಷೇತ್ರದಲ್ಲಿ ಪಕ್ಷದ ಹಿರಿಯ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಬಿ.ಜನಾರ್ಧನ ಪೂಜಾರಿ ಅವರು ಉತ್ಸುಕರಾಗಿದ್ದು, ಅವರಿಗೆ ಟಿಕೆಟ್ ನೀಡಲು ರಾಜ್ಯ ಕಾಂಗ್ರೆಸ್ ಮುಖಂಡರು ಸಹಮತ ಹೊಂದಿದ್ದಾರೆ. ಆದರೆ ಕೇಂದ್ರ ಸಚಿವ ಎಂ. ವೀರಪ್ಪ ಮೊಯಿಲಿ ಅವರ ಪುತ್ರ ಹರ್ಷ ಮೊಯಿಲಿ ಅವರೂ ಮಂಗಳೂರು ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಒಂದು ವೇಳೆ ಅಭ್ಯರ್ಥಿ ಆಯ್ಕೆಗೆ ಆಂತರಿಕ ಚುನಾವಣೆ ನಡೆದರೆ, ಪೂಜಾರಿ ಅವರು ಮುಜುಗರದ ಸನ್ನಿವೇಶ ಎದುರಿಸಬೇಕಾಗಬಹುದು ಎಂಬ ಆತಂಕ ಕಾಂಗ್ರೆಸ್ ಮುಖಂಡರನ್ನು ಕಾಡುತ್ತಿದೆ.