ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ: ಎಎಪಿಗೆ ಹಿನ್ನಡೆ

Vishwanath S
Updated On : 24 Feb 2014, 3:58 am

ನವದೆಹಲಿ: ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ವಿಷಯಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷಕ್ಕೆ ತೀವ್ರ ಹಿನ್ನೆಡೆಯಾಗಿದ್ದು, ಈ ಸಂಬಂಧ ಕಾಂಗ್ರೆಸ್ ಹಾಗೂ ಬಿಜೆಪಿಗೆ ನೋಟಿಸ್ ನೀಡಲು ಸೋಮವಾರ ಸುಪ್ರೀಂಕೋರ್ಟ್ ನಿರಾಕರಿಸಿದೆ.

ದೆಹಲಿಯಲ್ಲಿ ಮತ್ತೆ ಚುನಾವಣೆಗೆ ಮುಂದಾಗದ ಕಾಂಗ್ರೆಸ್ ಹಾಗೂ ಬಿಜೆಪಿ, ರಾಷ್ಟ್ರ ರಾಜಧಾನಿಯಲ್ಲಿ ಸಾಂವಿಧಾನಿಕ ಬಿಕ್ಕಟ್ಟು ನಿರ್ಮಾಣ ಮಾಡಿ ರಾಷ್ಟ್ರಪತಿ ಆಡಳಿತ ಹೇರಲು ಮುಂದಾಗಿವೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಅವಕಾಶ ನೀಡದಂತೆ ಕೋರಿ ಎಎಪಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.

ಇಂದು ಎಎಪಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಅರ್ಜಿ ವಜಾಗೊಳಿಸಿದೆ. ಅಲ್ಲದೆ ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಕುರಿತಂತೆ ಇನ್ನು 10 ದಿನಗಳೊಳಗಾಗಿ ಸಮಜಾಯಿಷಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಇದೇ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿಗಳಿಗೆ ನೋಟಿಸ್ ನೀಡಲು ನ್ಯಾಯಮೂರ್ತಿಗಳಾದ ಆರ್.ಎಂ ಲೋಧ ಹಾಗೂ ದೀಪಕ್ ಮಿಶ್ರ ಅವರನ್ನೊಳಗೊಂಡ ವಿಭಾಗೀಯ ಪೀಠ ನಿರಾಕರಿಸಿದ್ದು, ಇದು ಸಂಪೂರ್ಣವಾಗಿ ಸಾಂವಿಧಾನಿಕ ವ್ಯವಹಾರವಾಗಿದ್ದು, ಈ ಬಗ್ಗೆ ಮಧ್ಯ ಪ್ರವೇಶಿಸಲು ನಾವು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಪ್ರಕರಣದ ಮುಂದಿನ ವಿಚಾರಣೆಯನ್ನು ಮಾರ್ಚ್ 7ಕ್ಕೆ ಮುಂದೂಡಿದೆ.

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದ ನಂತರ ದೆಹಲಿಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ಕೇಂದ್ರ ಸರ್ಕಾರ ತೀರ್ಮಾನಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement