ರಾಜೀವ್ ಹಂತಕರ ಶಿಕ್ಷೆ ಪ್ರಮಾಣ ಕಡಿತ ಬೇಡ: ಸುಪ್ರೀಂಗೆ ಕೇಂದ್ರ ಮನವಿ
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರಿಗೆ ನೀಡಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿರುವ ಸುಪ್ರೀಂಕೋರ್ಟ್ ತನ್ನ ತೀರ್ಪನ್ನು...
ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರಿಗೆ ನೀಡಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿರುವ ಸುಪ್ರೀಂಕೋರ್ಟ್ ತನ್ನ ತೀರ್ಪನ್ನು ಪುನರ್ ಪರಾಮರ್ಶಿಸುವಂತೆ ಕೇಂದ್ರ ಸರ್ಕಾರ ಶನಿವಾರ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
ರಾಜೀವ್ ಗಾಂಧಿ ಅವರನ್ನು ಹತ್ಯೆಗೈದು ಪ್ರಸ್ತುತ ತಮಿಳುನಾಡಿನ ವೆಲ್ಲೂರು ಜೈಲಿನಲ್ಲಿರುವ ಮುರುಗನ್, ಪೆರಾರಿಯನ್, ಸಂತನ್ ಗಲ್ಲು ಶಿಕ್ಷೆಯನ್ನು ಕೆಲ ದಿನಗಳ ಹಿಂದೆ ಸುಪ್ರೀಂಕೋರ್ಟ್ ಜೀವಾವಧಿ ಶಿಕ್ಷೆಗೆ ಪರಿವರ್ತಿಸಿತ್ತು.
ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇಂದು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದು, ರಾಜೀವ್ ಹಂತಕರ ಶಿಕ್ಷೆಯ ಪ್ರಮಾಣವನ್ನು ಕಡಿತಗೊಳಿಸುವುದು ಬೇಡ ಎಂದು ಕೇಂದ್ರ ಸಾರ್ಕರ ಮುಖ್ಯ ನ್ಯಾಯಮೂರ್ತಿ ಪಿ. ಸದಾಶಿವಂ ಅವರ ಪೀಠಕ್ಕೆ ಮನವಿ ಮಾಡಿದೆ.
ಗಲ್ಲು ಶಿಕ್ಷೆ ಜಾರಿಗೊಳಿಸುವಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ಅದನ್ನು ಜೀವಾವಧಿ ಶಿಕ್ಷೆಯಯಾಗಿ ಪರಿವರ್ತಿಸುವುದರಿಂದ ದೇಶಕ್ಕೆ ತಪ್ಪು ಸಂದೇಶ ನೀಡಿದಂತಾಗುತ್ತದೆ ಎಂದು ಕೇಂದ್ರ ಸರ್ಕಾರ ತನ್ನ ಮೇಲ್ಮನವಿಯಲ್ಲಿ ತಿಳಿಸಿದೆ.