ನ್ಯಾ.ಗಂಗೂಲಿ ವಜಾಕ್ಕೆ ತಡೆ ಕೋರಿ ಸಲ್ಲಿಸಿದ್ದ ಪಿಐಎಲ್ ವಜಾ
ಪಶ್ಚಿಮ ಬಂಗಾಳ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ನ್ಯಾ. ಅಶೋಕ್ ಕುಮಾರ್ ಗಂಗೂಲಿ ವಜಾಕ್ಕೆ..
ನವದೆಹಲಿ: ಪಶ್ಚಿಮ ಬಂಗಾಳ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ನ್ಯಾ. ಅಶೋಕ್ ಕುಮಾರ್ ಗಂಗೂಲಿ ಅವರ ವಜಾಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯನ್ನು ಸೋಮವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ತರಬೇತಿನಿರತ ಯುವ ವಕೀಲೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ನ್ಯಾ.ಗಂಗೂಲಿ ಅವರಿಗೆ ಈ ಬೆಳವಣಿಗೆಯಿಂದ ಭಾರಿ ಹಿನ್ನೆಡೆಯಾಗಿದೆ.
ವರದಿಗಳ ಪ್ರಕಾರ, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ.ಗಂಗೂಲಿ ಅವರು ಪಶ್ಚಿಮ ಬಂಗಾಳ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಮಾಜಿ ಅಟರ್ನಿ ಜನರಲ್ ಸೊಲಿ ಸೊರಬ್ಜಿ ಅವರೊಂದಿಗೆ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.
ಈಗಾಗಲೇ ಕೇಂದ್ರ ಸಚಿವ ಸಂಪುಟವು ಗಂಗೂಲಿ ಅವರನ್ನು ಆ ಸ್ಥಾನದಿಂದ ವಜಾಗೊಳಿಸುವಂತೆ ರಾಷ್ಟ್ರಪತಿಗಳು ಆದೇಶಿಸಬೇಕೆಂದು ನಿರ್ಣಯ ಕೈಗೊಂಡಿದ್ದು, ಅದನ್ನು ಪ್ರಣಬ್ ಮುಖರ್ಜಿ ಅವರಿಗೆ ರವಾನಿಸಿದೆ. 'ರಾಷ್ಟ್ರಪತಿಗಳು ಈ ಕುರಿತ ಮುಂದಿನ ಪ್ರಕ್ರಿಯೆ ಕೈಗೊಳ್ಳಲು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಿಗೆ ಶಿಫಾರಸು ಮಾಡಿದ ತಕ್ಷಣವೇ ನ್ಯಾ| ಗಂಗೂಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಈ ವಿಷಯವನ್ನು ಅವರು ತಮ್ಮ ಸ್ನೇಹಿತರೊಂದಿಗೆ ಹಂಚಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ'.