ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಪಿಎಸ್‌ಐ ಬಂಡೆ ಕುಟುಂಬಕ್ಕೆ 50 ಲಕ್ಷ ಪರಿಹಾರ: ಸಿಎಂ

ಗುಲ್ಪರ್ಗಾದಲ್ಲಿ ನಡೆದ ಶೂಟೌಟ್ ಪ್ರಕರಣದಲ್ಲಿ ಮೃತಪಟ್ಟ ಗುಲ್ಬರ್ಗಾ ಸ್ಟೇಷನ್ ಬಜಾರ್ ಠಾಣೆ ಪಿಎಸ್‌ಐ ಮಲ್ಲಿಕಾರ್ಜುನ ಬಂಡೆ ಅವರ ಕುಟುಂಬಕ್ಕೆ 50 ಲಕ್ಷ ರುಪಾಯಿ ...

Lingaraj Badiger
Updated On : 16 Jan 2014, 11:44 am

ನವದೆಹಲಿ: ಗುಲ್ಪರ್ಗಾದಲ್ಲಿ ನಡೆದ ಶೂಟೌಟ್ ಪ್ರಕರಣದಲ್ಲಿ ಮೃತಪಟ್ಟ ಗುಲ್ಬರ್ಗಾ ಸ್ಟೇಷನ್ ಬಜಾರ್ ಠಾಣೆ ಪಿಎಸ್‌ಐ ಮಲ್ಲಿಕಾರ್ಜುನ ಬಂಡೆ ಅವರ ಕುಟುಂಬಕ್ಕೆ 50 ಲಕ್ಷ ರುಪಾಯಿ ಪರಿಹಾರ ಘೋಷಿಸುವಂತೆ ಗೃಹ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.

ಇಂದು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಸರ್ಕಾರದ ಪರವಾಗಿ ಗೃಹ ಸಚಿವರು ಬಂಡೆ ಅಂತ್ಯಸಂಸ್ಕಾರದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ತಿಳಿಸಿದರು.

ಈ ಮುಂಚೆ ಬಂಡೆ ಕುಟುಂಬಕ್ಕೆ ಸರ್ಕಾರ 15 ಲಕ್ಷ ರುಪಾಯಿ ಪರಿಹಾರ ಘೋಷಿಸಿತ್ತು. ಆದರೆ ಇದಕ್ಕೆ ಪೊಲೀಸ್ ಇಲಾಖೆಯಿಂದ ಮತ್ತು ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಪರಿಹಾರದ ಮೊತ್ತವನ್ನು 50 ಲಕ್ಷಕ್ಕೆ ಹೆಚ್ಚಿಸಿದ್ದಾರೆ.

ಬಂಡೆ ನಿಧನದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಗುಲ್ಬರ್ಗಾದ ಐವಾನ್ ಷಾಹಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದ ಗೃಹ ಸಚಿವ ಕೆ.ಜೆ ಜಾರ್ಜ್ ಅವರು, ಕುಟುಂಬದ ಬಗ್ಗೆ ನಮಗೂ ಕಳಕಳಿ ಇದೆ. ಹೀಗಾಗಿ ಅವರ ಕುಟುಂಬಕ್ಕೆ ಪೊಲೀಸ್ ಇಲಾಖೆಯಿಂದ 10 ಲಕ್ಷ ರುಪಾಯಿ ಹಾಗೂ ರಾಜ್ಯ ಸರ್ಕಾರದ ವತಿಯಿಂದ 15 ಲಕ್ಷ ರುಪಾಯಿ ಸೇರಿದಂತೆ ಒಟ್ಟು 25 ಲಕ್ಷ ಪರಿಹಾರ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದರು.

ಬಂಡೆ ಅವರ ಪತ್ನಿ ಇಚ್ಚಿಸಿದ ಕಡೆ ಒಂದು ಸೈಟ್ ಹಾಗೂ ಪ್ರತಿ ತಿಂಗಳು ಪತಿಯ ಸಂಪೂರ್ಣ ಸಂಬಳ ನೀಡಲಾಗುವುದು. ಅಲ್ಲದೆ ಮಕ್ಕಳ ವಿದ್ಯಾಭ್ಯಾಸದ ವೆಚ್ಚ ಭರಿಸಲು ಸಹ ಸರ್ಕಾರ ಸಿದ್ಧವಿದೆ ಎಂದು ಜಾರ್ಜ್ ಹೇಳಿದ್ದರು.

ಇನ್ನು ಬಂಡೆ ನಿಧನದ ಹಿನ್ನೆಲೆಯಲ್ಲಿ ಉತ್ತರ ವಲಯದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಒಂದು ದಿನ ಶೋಕಾಚರಣೆ ಮಾಡಲಾಗುವುದು ಎಂದು ಉತ್ತರ ವಲಯ ಐಜಿಪಿ ಭಾಸ್ಕರ್ ರಾವ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement