ಕೇಜ್ರಿವಾಲ್ ಧರಣಿ: ಕೇಂದ್ರ, ದೆಹಲಿ ಸರ್ಕಾರಕ್ಕೆ ನೋಟಿಸ್
ನವದೆಹಲಿ: ರೇಲ್ವೆ ಭವನದ ಎದುರು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದಲ್ಲಿ ನಡೆದ ಎರಡು ದಿನಗಳ ಪ್ರತಿಭಟನೆಗೆ ಸಂಬಂಧಿಸಿ ಸುಪ್ರೀಂಕೋರ್ಟ್ ಶುಕ್ರವಾರ ದೆಹಲಿ ಪೊಲೀಸರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ ಈ ಸಂಬಂಧ ಕೇಂದ್ರ ಹಾಗೂ ದೆಹಲಿ ಸರ್ಕಾರಕ್ಕೆ ನೋಟಿಸ್ ಅನ್ನೂ ಜಾರಿ ಮಾಡಿದೆ.
ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿಗಳು ಕಾನೂನು ಉಲ್ಲಂಘಿಸಬಹುದೇ ಎಂದು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಕೇಂದ್ರ ಹಾಗೂ ದೆಹಲಿ ಸರ್ಕಾರಗಳಿಗೆ ನೋಟಿಸ್ ನೀಡಿದೆ.
ವಕೀಲ ಎಂ.ಎಲ್. ಶರ್ಮಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ದೆಹಲಿ ಪೊಲೀಸರ ಕ್ರಮದ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿತು.
ನಿಷೇಧಾಜ್ಞೆಯ ಹೊರತಾಗಿಯೂ ರೇಲ್ವೆ ಭವನದ ಹೊರಗೆ ಪ್ರತಿಭಟನಾಕಾರರಿಗೆ ಜಮಾಯಿಸಲು ಹೇಗೆ ಅನುಮತಿ ನೀಡಲಾಯಿತು ಎಂದು ನ್ಯಾ. ಆರ್.ಎಂ. ಲೋಧಾ ಮತ್ತು ನ್ಯಾ. ಶಿವ ಕೀರ್ತಿ ಸಿಂಗ್ ಅವರಿದ್ದ ಪೀಠ ಪ್ರಶ್ನಿಸಿತು. ಈ ಸಂಬಂಧ ಜ.31ರೊಳಗೆ ವರದಿ ನೀಡುವಂತೆ ಪೊಲೀಸ್ ಆಯುಕ್ತರಿಗೆ ಕೋರ್ಟ್ ನಿರ್ದೇಶನ ನೀಡಿದೆ.
ಕಾನೂನು ಸಚಿವ ಸೋಮನಾಥ ಭಾರ್ತಿ ಅವರ ದೂರಿನ ಹೊರತಾಗಿಯೂ ದಾಳಿ ನಡೆಸಲು ಹಿಂದೇಟು ಹಾಕಿದ ಐವರು ಪೊಲೀಸರನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಆಮ್ ಆದ್ಮಿ ಪಕ್ಷ ಕಳೆದ ವಾರ ರೇಲ್ವೆ ಭವನದ ಎದುರು ಎರಡು ದಿನಗಳ ಕಾಲ ಪ್ರತಿಭಟನೆ ನಡೆಸಿತ್ತು. ಮುಖ್ಯಮಂತ್ರಿ ಕೇಜ್ರಿವಾಲ್ ಸೇರಿದಂತೆ ಸಚಿವ ಸಂಪುಟದ ಎಲ್ಲ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡದ್ದಕ್ಕೆ ದೇಶಾದ್ಯಂತ ತೀವ್ರ ಟೀಕೆ ವ್ಯಕ್ತವಾಗಿತ್ತು.