ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮಠಗಳನ್ನು ಸರ್ಕಾರದ ವ್ಯಾಪ್ತಿಗೆ ತರುವ ಚಿಂತನೆಯಿಲ್ಲ: ಪ್ರಕಾಶ್ ಹುಕ್ಕೇರಿ

ಸ್ವಪಕ್ಷ ಹಾಗೂ ಪ್ರತಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಠಗಳನ್ನು ಸರ್ಕಾರದ ವ್ಯಾಪ್ತಿಗೆ...

Lingaraj Badiger
Updated On : 29 Jan 2014, 1:27 am

ಬೆಂಗಳೂರು: ಸ್ವಪಕ್ಷ ಹಾಗೂ ಪ್ರತಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಠಗಳನ್ನು ಸರ್ಕಾರದ ವ್ಯಾಪ್ತಿಗೆ ತರುವ ಚಿಂತನೆಯನ್ನು ರಾಜ್ಯ ಸರ್ಕಾರ ಬುಧವಾರ ಕೈ ಬಿಟ್ಟಿದೆ.

ಮಠಗಳು ಸರ್ಕಾರದ ನಿಯಂತ್ರಣಕ್ಕೆ ಬೇಡ. ಅಂತಹ ಚಿಂತನೆ ಇದ್ದರೆ ಮೊದಲು ಕೈ ಬಿಡಿ ಎಂದು ಇಂದು ವಿಧಾನಸಭೆಯಲ್ಲಿ ಶಾಸಕ ಮಾನಪ್ಪ ಭಂಡಾರಿ ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಜರಾಯಿ ಹಾಗೂ ಸಕ್ಕರೆ ಖಾತೆ ಸಚಿವ ಪ್ರಕಾಶ್ ಹುಕ್ಕೇರಿ ಅವರು, ಮಠಗಳು ಮುಜರಾಯಿ ವ್ಯಾಪ್ತಿಗೆ ಒಳಪಡುವುದಿಲ್ಲ ಮತ್ತು ಸರ್ಕಾರದ ವ್ಯಾಪ್ತಿಗೆ ತರುವ ಯಾವುದೇ ಚಿಂತನೆ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಧಾರ್ಮಿಕ ದತ್ತಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಎಲ್ಲ ಮಠಗಳನ್ನು ಸರ್ಕಾರದ ವ್ಯಾಪ್ತಿಗೆ ತರಲು ಸರ್ಕಾರ ಮುಂದಾಗಿತ್ತು. ಆದರೆ ಇದಕ್ಕೆ ಕಾಂಗ್ರೆಸ್‌ನ ಹಿರಿಯ ನಾಯಕ ಜನಾರ್ದನ ಪೂಜಾರಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರೇ ವಿರೋಧ ವ್ಯಕ್ತಪಡಿಸಿದ್ದರು.

ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಹಾಗೂ ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಅವರು ಸರ್ಕಾರದ ಈ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದ್ದರು. ಜನರ ನಂಬಿಕೆಯ ಪ್ರತೀಕವಾಗಿರುವ ಮಠಗಳನ್ನು ಸರ್ಕಾರ ಸ್ವಾಧೀನ ಪಡಿಸಿಕೊಳ್ಳುವ ಕೆಲಸಕ್ಕೆ ಕೈ ಹಾಕಿದಲ್ಲಿ ರಾಜ್ಯದಲ್ಲಿ ಕ್ರಾಂತಿಯಾಗಬಹುದು ಎಂದು ಶೋಭಾ ಕರಂದ್ಲಾಜೆ ಎಚ್ಚರಿಸಿದ್ದರು.

ಸರ್ಕಾರಕ್ಕೆ ಮಾಡಲು ಬೇಕಾದಷ್ಟು ಕೆಲಸಗಳಿವೆ. ಅವನ್ನು ಬಿಟ್ಟು ಮಠಗಳನ್ನು ವಶಪಡಿಸಿಕೊಳ್ಳುವ ಉಸಾಬರಿ ಏಕೆ? ಮಠಗಳಿಂದ ಈ ಮಣ್ಣಿಗೆ ಎಂದೂ ಹೊರೆಯಾಗಿಲ್ಲ. ಸರ್ಕಾರವೂ ಶಾಶ್ವತವಲ್ಲ, ಜನಹಿತ ಮರೆತರೆ ಅದು ಸರ್ಕಾರಕ್ಕೆ ಶಾಪವಾಗಿ ಪರಿಣಮಿಸಬಹುದು ಎಂದು ಶೋಭಾ ಹೇಳಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement