ಕೇಜ್ರಿವಾಲ್ ಹೇಳಿಕೆಗೆ ಡೀವಿ, ಎಚ್‌ಡಿಕೆ ಗರಂ
ಅರವಿಂದ್ ಕೇಜ್ರಿವಾಲ್ ಅವರ ಭ್ರಷ್ಟ ರಾಜಕಾರಣಿಗಳ ಪಟ್ಟಿ ಕುರಿತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ತಿರುಗೇಟು ನೀಡಿದ್ದಾರೆ.
ಬೆಂಗಳೂರು: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಭ್ರಷ್ಟ ರಾಜಕಾರಣಿಗಳ ಪಟ್ಟಿ ಕುರಿತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ತಿರುಗೇಟು ನೀಡಿದ್ದಾರೆ.
ಕೇಜ್ರಿವಾಲ್ ಭ್ರಷ್ಟ ರಾಜಕಾರಣಿಗಳ ಪಟ್ಟಿಯನ್ನು ಅಲ್ಲಗಳೆದಿರುವ ಸದಾನಂದಗೌಡ ಅವರು, ಕೇಜ್ರಿವಾಲ್ ಹೇಳಿಕೆಯಲ್ಲಿ ಪ್ರಬುದ್ಧತೆ ಇಲ್ಲ ಎಂದು ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಅರವಿಂದ್ ಕೇಜ್ರಿವಾಲ್ ಅವರಿಗೆ ನೈತಿಕ ಹಕ್ಕಿಲ್ಲ. ದೆಹಲಿಯಲ್ಲಿ ಭ್ರಷ್ಟ ಕಾಂಗ್ರೆಸ್ ಪಕ್ಷದೊಂದಿಗೆ ಸೇರಿ ಸರ್ಕಾರ ರಚಿಸಿದ್ದಾರೆ. ಅವರಿಗೆ ಈ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಅಲ್ಲದೆ ಅವರ ಹೇಳಿಕೆಯಲ್ಲಿಯೂ ಪ್ರಬುದ್ಧತೆ ಕಾಣುವುದಿಲ್ಲ. ಹೀಗಾಗಿ ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದು ಹೇಳಿದರು.
ದಾಖಲೆ ಇದ್ದರೆ ಬಿಡುಗಡೆ ಮಾಡಲಿ: ಹೆಚ್‌ಡಿಕೆ ಸವಾಲ್
ತಮ್ಮ ವಿರುದ್ಧ ಕೇಜ್ರಿವಾಲ್ ಮಾಡಿರುವ ಆರೋಪದ ಕುರಿತು ಕೆಂಡಾಮಂಡಲರಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಅವರು, ಕೇಜ್ರಿವಾಲ್ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಅವರ ಹೇಳಿಕೆಯಲ್ಲಿ ನನ್ನ ಹೆಸರನ್ನು ಲಘುವಾಗಿ ಪರಿಗಣಿಸಿರುವುದು ಸರಿಯಲ್ಲ. ಇಂತಹ ಹೇಳಿಕೆಗಳು ಅವರಿಗೆ ಶೋಭೆ ತರುವುದಿಲ್ಲ. ಅವರು ಈ ಕೂಡಲೇ ಕ್ಷಮೆಯಾಚಿಸಬೇಕು ಎಂದು ಕುಮಾರ ಸ್ವಾಮಿ ಆಗ್ರಹಿಸದರು. ಅಲ್ಲದೆ ತಮ್ಮ ಮೇಲಿನ ಆರೋಪದ ಬಗ್ಗೆ ಅವರ ಬಳಿ ಸಾಕ್ಷ್ಯಾಧಾರಗಳಿದ್ದರೆ ಸಾಬೀತು ಪಡಿಸಲಿ ಅಥವಾ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಸವಾಲ್ ಎಸೆದರು.
ನವದೆಹಲಿಯಲ್ಲಿ ಇಂದು ಬೆಳಗ್ಗೆ ನಡೆದ ಆಮ್ ಆದ್ಮಿ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ್ದ ಅರವಿಂದ್ ಕೇಜ್ರಿವಾಲ್ ಅವರು ದೇಶದ ಭ್ರಷ್ಟ ರಾಜಕಾರಿಣಿಗಳ ಹೆಸರನ್ನು ಪಟ್ಟಿ ಮಾಡಿದ್ದರು. ಆ ಪಟ್ಟಿಯಲ್ಲಿ ಕರ್ನಾಟಕದ ಮೂವರು ಮಾಜಿ ಮುಖ್ಯಮಂತ್ರಿಗಳು ಮತ್ತು ಓರ್ವ ಸಂಸದರು ಸೇರಿದ್ದಾರೆ. ಅಲ್ಲದೆ ಈ ಸಂಸದರನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲಿಸುವಂತೆ ಕರೆ ನೀಡಿದ್ದರು.