ಬುಲ್ಲರ್ ಗಲ್ಲು ಶಿಕ್ಷೆಗೆ ಸುಪ್ರೀಂ ತಡೆ, ಕೇಂದ್ರಕ್ಕೆ ನೋಟಿಸ್
1993ರ ದೆಹಲಿ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿ ದೇವೇಂದ್ರ ಸಿಂಗ್ ಬುಲ್ಲರ್ ಗಲ್ಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ..
ನವದೆಹಲಿ: 1993ರ ದೆಹಲಿ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿ ದೇವೇಂದ್ರ ಸಿಂಗ್ ಬುಲ್ಲರ್ ಗಲ್ಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ. ಅಲ್ಲದೆ ಈ ಸಂಬಂಧ ಕೇಂದ್ರ ಹಾಗೂ ದೆಹಲಿ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಕ್ಷಮದಾನ ಅರ್ಜಿ ವಿಲೇವಾರಿಯಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ತನ್ನ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಮಾರ್ಪಡಿಸಬೇಕು ಎಂದು ಕೋರಿ ಬುಲ್ಲರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಪಿ.ಸದಾಶಿವಂ ಅವರು, ಬುಲ್ಲರ್ ಗಲ್ಲು ಶಿಕ್ಷೆಗೆ ತಡೆ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಅಭಿಪ್ರಾಯ ಕೇಳಿರುವ ಕೋರ್ಟ್, ಬುಲ್ಲರ್ ಮಾನಸಿಕ ಸ್ಥಿತಿಗತಿಯ ಕುರಿತು ವೈದ್ಯಕೀಯ ವರದಿ ನೀಡುವಂತೆ ಕೇಂದ್ರ ಹಾಗೂ ದೆಹಲಿ ಸರ್ಕಾರಕ್ಕೆ ಸೂಚಿಸಿ, ಪ್ರಕರಣದ ವಿಚಾರಣೆಯನ್ನು ಫೆಬ್ರುವರಿ 19ಕ್ಕೆ ಮುಂದೂಡಿದೆ.