ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬಜೆಟ್ ಅಧಿವೇಶನ: ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬೆಲೆ ಏರಿಕೆಯನ್ನು ಮುಂದಿಟ್ಟುಕೊಂಡು ಮೋದಿ ಸರ್ಕಾರದ ಮೇಲೆ ಸವಾರಿ..

Srinivasa Murthy VN
Updated On : 7 Jul 2014, 7:34 am

ನವದೆಹಲಿ: ನೂತನ ಎನ್‌ಡಿಎ ಸರ್ಕಾರ ಬಜೆಟ್ ಪ್ರಕ್ರಿಯೆಯಲ್ಲಿ ತೊಡಗಿದ್ದರೆ ಇತ್ತ ಪ್ರತಿಪಕ್ಷ ಕಾಂಗ್ರೆಸ್, ಬೆಲೆ ಏರಿಕೆಯನ್ನು ಮುಂದಿಟ್ಟುಕೊಂಡು ಮೋದಿ ಸರ್ಕಾರದ ಮೇಲೆ ಸವಾರಿ ಮಾಡಲು ಪ್ರಯತ್ನಿಸುತ್ತಿದೆ.

ರೈಲು ದರ ಏರಿಕೆ, ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ದರ ಏರಿಕೆಯನ್ನು ಪ್ರಮುಖ ಅಸ್ತ್ರವನ್ನಾಗಿ ಮಾಡಿಕೊಂಡಿರುವ ಕಾಂಗ್ರೆಸ್ ಪಕ್ಷ ಸಂಸತ್ ಕಲಾಪದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಬೆಲೆ ಏರಿಕೆ ಕುರಿತು ವಿಶೇಷ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸುತ್ತಿದೆ. ಇತ್ತ ಇದೇ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಸಂಸತ್ ಭವನದ ಹೊರಗಡೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಂಗ್ರೆಸ್ ಮುಖಂಡ ಕಮಲ್‌ನಾಥ್ ಅವರ ನೇತೃತ್ವದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಿಂದಾಗಿ ಜಂತರ್ ಮಂತರ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ.

ಲೋಕಸಭೆಯಲ್ಲಿ ಮಾತ್ರವಲ್ಲದೇ ರಾಜ್ಯಸಭೆಯಲ್ಲಿಯೂ ಇದೇ ಪರಿಸ್ಥಿತಿ ಮುಂದುವರೆದಿದ್ದು, ರಾಜ್ಯಸಭೆಯ ನಾಯಕರು ಕೂಡ ಆಗಿರುವ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ವಿರುದ್ಧ ಕಾಂಗ್ರೆಸ್ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸುತ್ತಿದ್ದಾರೆ.

ಕೈ ಪ್ರತಿಭಟನೆಯಿಂದಾಗಿ ಎರಡೆರಡುಬಾರಿ ಸದನವನ್ನು ಮುದೂಡಿದ ಸ್ಪೀಕರ್
ಸಂಸತ್ ಕಲಾಪದಲ್ಲಿ ಪದೇ ಪದೇ ಕಾಂಗ್ರೆಸ್ ಪಕ್ಷದ ಸದಸ್ಯರು ನಿರಂತರ ಪ್ರತಿಭಟನೆಯಲ್ಲಿ ತೊಡಗಿದ ಪರಿಣಾಮ ಕಲಾಪಕ್ಕೆ ತೀವ್ರ ಅಡಚಣೆ ಉಂಟಾಗಿತ್ತು. ಹೀಗಾಗಿ ಕಲಾಪವನ್ನು ಎರಡೆರಡು ಬಾರಿ ಮುಂದೂಡಲಾಗಿತ್ತು. ಹೀಗಾಗಿ ಬೆಲೆ ಏರಿಕೆ ಕುರಿತಂತೆ ಚರ್ಚಿಸಲು ಕೇಂದ್ರ ಸರ್ಕಾರ ಷರತ್ತುಬದ್ದ ಒಪ್ಪಿಗೆ ನೀಡಿದೆ.

ಉಭಯ ಸದನಗಳಲ್ಲಿ ಚರ್ಚೆಗೆ ಅವಕಾಶ
ಇದೇ ವೇಳೆ ಈ ಹಿಂದೆ ಕೆಳಮನೆಯಲ್ಲಿ ಬೆಲೆ ಏರಿಕೆ ಕುರಿತು ಚರ್ಚಿಸಲು ವಿಶೇಷ ಅವಧಿ ಮೀಸಲಿಡುವ ಕುರಿತು ಒಪ್ಪಿಗೆ ಸೂಚಿಸಿದ್ದ ಕೇಂದ್ರ ಸರ್ಕಾರ, ಇದೀಗ ಲೋಕಸಭೆಯಲ್ಲಿಯೂ ಚರ್ಚೆಗೆ ಕಾಲಾವಕಾಶ ನಿಗದಿಗೆ ಸಮ್ಮತಿ ಸೂಚಿಸಿದೆ. ಉಭಯ ಸದನಗಳಲ್ಲಿ ಬೆಲೆ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಎರಡೂವರೆ ಗಂಟೆಗಳ ಕಾಲ ವಿಶೇಷ ಚರ್ಚೆ ನಡೆಸಲು ಸಿದ್ಧವಿರುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಆದರೆ ಲೋಕಸಭೆಯಲ್ಲಿ ಮತದಾನ ರಹಿತ ಚರ್ಚೆಯ ಷರತ್ತಿನ ಮೇರೆಗೆ ವಿಶೇಷ ಚರ್ಚೆಗೆ ಅವಕಾಶ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

ನರೇಂದ್ರ ಮೋದಿ ವಿರುದ್ಧ ಮಾಯಾವತಿ ವಾಗ್ದಾಳಿ

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರು, ಚುನಾವಣಾ ಪೂರ್ವದಲ್ಲಿ ನರೇಂದ್ರ ಮೋದಿ ಅವರು'ದೇಶಕ್ಕೆ ಒಳ್ಳೆಯ ದಿನಗಳು ಬರಲಿವೆ ಎಂದು ಹೇಳಿದ್ದರು. ಆದರೆ ಇದೀಗ ಅದು ದೇಶದ ಜನರ ಭಾಗ್ಯಕ್ಕೆ ದುಬಾರಿ ದಿನಗಳಾಗಿ ಮಾರ್ಪಟ್ಟಿವೆ' ಎಂದು ಕಿಡಿಕಾರಿದ್ದಾರೆ.

ಒಟ್ಟಾರೆ ಕೇಂದ್ರಸರ್ಕಾರ ತಮ್ಮ ಚೊಚ್ಚಲ ಬಜೆಟ್ ಸಿದ್ಧತೆ ಮಾಡಿಕೊಳ್ಳುತ್ತಿದ್ದರೆ, ಇತ್ತ ಪ್ರತಿಪಕ್ಷಗಳು ಬೆಲೆ ಏರಿಕೆ ವಿಚಾರವನ್ನೇ ಮುಂದಿಟ್ಟುಕೊಂಡು ಕೇಂದ್ರಸರ್ಕಾರವನ್ನು ಹಣಿಯಲು ಮುಂದಾಗಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement