ಕಟ್ಟಡ ನಿರ್ಮಾಣಕ್ಕೆ ಹೊಸ ನಿಯಮ: ವೆಂಕಯ್ಯ ನಾಯ್ಡು
ಬೆಂಗಳೂರು: ಕಾನೂನು ಬಾಹಿರವಾಗಿ ನಿರ್ಮಿಸಿರುವ ಕಟ್ಟಡಗಳಿಂದ ಆಗುತ್ತಿರುವ ಅನಾಹುತಗಳನ್ನು ತಪ್ಪಿಸುವ ಉದ್ದೇಶದಿಂದ ಶೀಘ್ರದಲ್ಲೇ ಹೊಸ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಜಾರಿ ಮಾಡಲಿದೆ ಎಂದು ಕೇಂದ್ರ ನಗರಾಭಿವೃದ್ಧಿ ಮತ್ತು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಂ. ವೆಂಕಯ್ಯನಾಯ್ಡು ತಿಳಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು, ಚೆನ್ನೈ ಸೇರಿದಂತೆ ದೇಶದಲ್ಲಿ ಹಲವು ಕಡೆ ಸಂಭವಿಸಿದ ಕಟ್ಟಡ ಕುಸಿತದಿಂದಾಗಿ ಸಾಕಷ್ಟು ಜೀವಹಾನಿ ಸಂಭವಿಸಿದ್ದು, ಇದನ್ನು ತಪ್ಪಿಸುವ ಉದ್ದೇಶದಿಂದಲೇ ಈ ಮಾರ್ಗಸೂಚಿ ಜಾರಿ ಮಾಡಲಾಗುತ್ತದೆ ಎಂದರು.
ಈ ಸಂಬಂಧ ಈಗಾಗಲೇ ಎಲ್ಲ ರಾಜ್ಯಗಳ ಸಚಿವರೊಂದಿಗೆ ಮಾತುಕತೆ ನಡೆಸಲಾಗಿದ್ದು, 25 ಅಂಶಗಳನ್ನು ಒಳಗೊಂಡ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದೆ. ಇದರಲ್ಲಿ ಅಕ್ರಮ ಕಟ್ಟಡವನ್ನು ಸಕ್ರಮಗೊಳಿಸಬೇಕೆ ಅಥವಾ ನೆಲಸಮಗೊಳಿಸಬೇಕೆ ಎಂಬುದರ ಕುರಿತಾಗಿ ಪ್ರತ್ಯೇಕವಾದ ಮಾರ್ಗಸೂಚಿ ರಚಿಸಲಾಗುವುದು ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಕಟ್ಟಡ ನಿರ್ಮಾಣ ನಿಯಮಗಳಲ್ಲಿ ಸಾಕಷ್ಟು ವ್ಯತ್ಯಾಸಗಳಿವೆ. ಇದು ಅಲ್ಲದೆ ಇನ್ನು ಸ್ಥಳೀಯ ಸಂಸ್ಥೆಗಳದ್ದು, ಮತ್ತೊಂದು ನಿಯಮ. ಹೀಗಾಗಿ ಅಕ್ರಮ ಕಟ್ಟಡಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದರು.