ಗ್ರಾಮ ಸಹಾಯಕರನ್ನು ಡಿ ದರ್ಜೆ ನೌಕರರೆಂದು ಪರಿಗಣಿಸಿ
ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ಸಹಾಯಕರನ್ನು ಡಿ ದರ್ಜೆ ನೌಕರರೆಂದು ಪರಿಗಣಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ಇಲಾಖಾ ಗ್ರಾಮ ಸಹಾಯಕರ ಸಂಘ ಒತ್ತಾಯಿಸಿದೆ.
ಈ ಕುರಿತು ಪತ್ರಿಕಾಗೋಷ್ಠಿ ಉದ್ದೇಶಿ ಮಾತನಾಡಿದ ಸಂಘದ ಗೌರವ ಅಧ್ಯಕ್ಷ ಕೊಳಗಿ ಮಂಜಪ್ಪ ಅವರು, ಕಂದಾಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 1400 ಗ್ರಾಮ ಸಹಾಯಕರನ್ನು ಡಿ ದರ್ಜೆ ನೌಕರರೆಂದು ಪರಿಗಣಿಸಿ, ಅವರ ಕೆಲಸವನ್ನು ಖಾಯಂಗೋಳಿಸಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದರು. ಅಲ್ಲದೆ ತಮ್ಮ ಬೇಡಿಕೆ ಈಡೇರಿಕೆಗೆ ಅಗ್ರಹಿಸಿ ಜುಲೈ 23 ರಂದು ವಿಧಾನಸೌಧ ಮುತ್ತಿಗೆ ಹಾಕುತ್ತೇವೆಂದು ತಿಳಿಸಿದರು.
ಇಲಾಖೆಯಲ್ಲಿ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಸಹಾಯಕ ನೌಕರರು ಸೌಲಭ್ಯಗಳಿಂದ ವಂಚಿತರಾಗಿದ್ದು, ಸರ್ಕಾರ ಈ ಕೂಡಲೇ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಂಘದ ಖಜಾಂಚಿ ಬಿ. ಶಿವರುದ್ರಪ್ಪ ಒತ್ತಾಯಿಸಿದ್ದಾರೆ.