ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಯುವತಿ ಅತ್ಯಾಚಾರ ಪ್ರಕರಣ: ಇನ್ಸ್‌ಪೆಕ್ಟರ್ ರಫಿ ವಿರುದ್ಧ ಎಫ್‌ಐಆರ್

ಫ್ರೇಜರ್‌ಟೌನ ಯುವತಿ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಅಮಾನತುಗೊಂಡಿದ್ದ ಪುಲಿಕೇಶಿನಗರ ಪೊಲೀಸ್ ಠಾಣೆ...

Lingaraj Badiger
Updated On : 17 Jul 2014, 1:18 am

ಬೆಂಗಳೂರು: ಫ್ರೇಜರ್‌ಟೌನ ಯುವತಿ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಅಮಾನತುಗೊಂಡಿದ್ದ ಪುಲಿಕೇಶಿನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಮಹ್ಮದ್ ರಫಿ ವಿರುಧ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಯಾವು ಕ್ಷಣದಲ್ಲೂ ರಫಿಯನ್ನು ಬಂಧಿಸುವ ಸಾಧ್ಯತೆ ಇದೆ.

ಕರ್ತವ್ಯ ನಿರ್ವಹಣೆಯಲ್ಲಿ ಬೇಜವಾಬ್ದಾರಿ ತೋರಿದ ರಫಿ ವಿರುದ್ಧ ಪುಲಿಕೇಶಿನಗರ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಸೆಕ್ಷನ್ 166ರಡಿ ಎಫ್‌ಐಆರ್ ದಾಖಲಿಸಿದ್ದಾರೆ.

ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದ ಇನ್ಸ್‌ಪೆಕ್ಟರ್: ದೂರು ದಾಖಲಾಗಿ ಆರೋಪಿಯನ್ನು ಬಂಧಿಸಿದ್ದರೂ, ಇನ್ಸ್‌ಪೆಕ್ಟರ್ ರಫೀಕ್‌ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿರಲಿಲ್ಲ. ಮಾಧ್ಯಮಗಳಲ್ಲಿ ಮಂಗಳವಾರ ವರದಿ ಪ್ರಕಟಗೊಂಡ ಬಳಿಕವಷ್ಟೇ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಘಟನೆ ವಿವರ ಗೊತ್ತಾಗಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಜಾರ್ಜ್ ನಿವಾಸಕ್ಕೆ ಮುತ್ತಿಗೆ ಯತ್ನ: ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್

ಫ್ರೇಜರ್‌ಟೌನ್ ಯುವತಿ ಮೇಲಿನ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರು ಗುರುವಾರ ಬೆಳಗ್ಗೆ ಗೃಹ ಸಚಿವ ಕೆ.ಜೆ.ಜಾರ್ಜ್ ಅವರ ನಿವಾಸಕ್ಕೆ ಮುತ್ತಿಗೆ ಹಾಕಿದರು. ಈ ವೇಳೆ ವಿದ್ಯಾರ್ಥಿಗಳನ್ನು ತಡೆದ ಪೊಲೀಸರು, ಅವರ ಮೇಲೆ ಲಾಠಿ ಚಾರ್ಜ್ ಸಹ ನಡೆಸಿದರು.

ಬೆಂಗಳೂರಿನ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಜಾರ್ಜ್ ಅವರ ನಿವಾಸಕ್ಕೆ ವಿದ್ಯಾರ್ಥಿಗಳು ಮುತ್ತಿಗೆ ಹಾಕಲು ಯತ್ನಿಸಿದರು. ಅಲ್ಲದೆ ವಿದ್ಯಾರ್ಥಿಗಳು ಪ್ರತಿಭಟನೆಗೆ ಅನುಮತಿ ಪಡೆಯದ ಹಿನ್ನಲೆಯಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಜಾರ್ಜ್ ಹಾಗೂ ಹಲ್ಲೆ ನಡೆಸಿದರು. ಇನ್ನು ಕೆಲವು ವಿದ್ಯಾರ್ಥಿಗಳ ಶರ್ಟ್ ಕಾಲರ್ ಹಿಡಿದು ಎಳೆದೊಯ್ದರು.

ಸದನದಲ್ಲಿ ತಾಳ್ಮೆ ಕಳೆದುಕೊಂಡ ಗೃಹ ಸಚಿವ ಜಾರ್ಜ್
ಚಲಿಸುವ ಕಾರಲ್ಲೇ ಯುವತಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣ ಇಂದು ಸಹ ವಿಧಾಸಭೆಯಲ್ಲಿ ಪ್ರತಿಧ್ವನಿಸಿತು. ವಿಷಯ ಪ್ರಸ್ತಾಪಿಸಿದ ಬಿಜೆಪಿ ಸದಸ್ಯರು, ಅತ್ಯಾಚಾರ ಪ್ರಕರಣ ಹಾಗೂ ಕರ್ತವ್ಯ ಲೋಪ ಎಸಗಿದ ಇನ್ಸ್ ಪೆಕ್ಟರ್ ವಿರುದ್ಧ ಕ್ರಮದ ಬಗ್ಗೆ ಇಂದು ಉತ್ತರ ನೀಡುವುದಾಗಿ ಸರ್ಕಾರ ಹೇಳಿತ್ತು. ತಕ್ಷಣ ಗೃಹ ಸಚಿವರು ಉತ್ತರ ನೀಡಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಸದಸ್ಯರ ಮಾತಿಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಕೆ.ಜೆ.ಜಾರ್ಜ್ ಅರ್ಧಗಂಟೆ ಬಳಿಕ ಉತ್ತರ ನೀಡುವುದಾಗಿ ತಿಳಿಸಿದರು. ಇದರಿಂದ ಆಕ್ರೋಶಗೊಂಡ ಬಿಜೆಪಿ ಸದಸ್ಯರು, ಸರ್ಕಾರ ಪ್ರಕರಣ ಮುಚ್ಚಿಹಾಕಲು ಯತ್ನಿಸುತ್ತಿದೆ. ಸರ್ಕಾರ ಹೆಣ್ಣುಮಕ್ಕಳ ರಕ್ಷಣೆ ಬಗ್ಗೆ ನಿರ್ಲಕ್ಷ ಧೋರಣೆ ಅನುಸರಿಸುತ್ತಿದೆ ಎಂದು ದೂರಿದರು. ಇದರಿಂದಾಗಿ ಆಡಳಿತ ಮತ್ತು ವಿರೋಧ ಪಕ್ಷಗಳ ನಾಯಕರ ನಡುವೆ ಮಾತಿನ ಚಕಮಕಿ ಆರಂಭವಾಯಿತು.

ಒಂದು ಹಂತದಲ್ಲಿ ತಾಳ್ಮೆ ಕಳೆದುಕೊಂಡ ಕೆ.ಜೆ.ಜಾರ್ಜ್, ನಿಮ್ಮ ಆಡಳಿತದಲ್ಲಿ ಯಾವುದೇ ಅತ್ಯಾಚಾರ, ಅನಾಚಾರ ನಡೆದಿಲ್ಲವೇ? ಎಂದು ಪ್ರತಿಪಕ್ಷಗಳನ್ನು ಪ್ರಶ್ನಿಸಿದರು. ಅಲ್ಲದೆ ನೀವು ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳಲು ಈ ರೀತಿ ಆಡುತ್ತಿದ್ದೀರಾ, ನಿಮ್ಮ ಅವಧಿಯಲ್ಲಿ ಎಷ್ಟು ಅತ್ಯಾಚಾರಗಳು ನಡೆದಿವೆ ಎಂಬುದು ಗೊತ್ತು ಎಂದು ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಕರಣ ಸಂಬಂಧ ಸರ್ಕಾರ ಎಲ್ಲಾ ರೀತಿಯ ಕ್ರಮ ತೆಗೆದುಕೊಂಡಿದೆ. ಇನ್ನೂ ಇಬ್ಬರು ಆರೋಪಿಗಳನ್ನು ಸಹ ಬಂಧಿಸಲಾಗಿದೆ ಎಂದು ಜಾರ್ಜ್ ಉತ್ತರಿಸಿದರು.

ಇನ್ನು ಜಾರ್ಜ್ ಅವರ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಶಾಸಕ ಸಿ.ಟಿ.ರವಿ, ಗೃಹ ಸಚಿವರಾಗಿ ಈ ರೀತಿ ಹೇಳಿಕೆ ನೀಡಲು ನಾಚಿಕೆಯಾಗಬೇಕು ಎಂದರು. ಈ ವೇಳೆ ಮಧ್ಯಪ್ರವೇಶಿಸಿದ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು, ಗೃಹ ಸಚಿವರಾಗಿ ತಾಳ್ಮೆ ಕಳೆದುಕೊಳ್ಳಬಾರದು ಎಂದು ಸಲಹೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement