ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿದ 'ಗಾಜಾ' ಹಿಂಸಾಚಾರ
ಗಾಜಾಪಟ್ಟಿಯಲ್ಲಿ ನಡೆಯುತ್ತಿರುವ ಹಿಂಸಾಚಾರ ಗುರುವಾರ ರಾಜ್ಯಸಭೆಯಲ್ಲಿಯೂ ಪ್ರತಿಧ್ವನಿಸಿದ್ದು, ಈ ಬಗ್ಗೆ ಚರ್ಚೆ ನಡೆಸಬೇಕು ಎಂದು..
ನವದೆಹಲಿ: ಗಾಜಾಪಟ್ಟಿಯಲ್ಲಿ ನಡೆಯುತ್ತಿರುವ ಹಿಂಸಾಚಾರ ಗುರುವಾರ ರಾಜ್ಯಸಭೆಯಲ್ಲಿಯೂ ಪ್ರತಿಧ್ವನಿಸಿದ್ದು, ಈ ಬಗ್ಗೆ ಚರ್ಚೆ ನಡೆಸಬೇಕು ಎಂದು ಪ್ರತಿಪಕ್ಷಗಳು ಗದ್ದಲ ಎಬ್ಬಿಸಿದ್ದರಿಂದ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.
ವಿವಾದಿತ ಗಾಜಾಪಟ್ಟಿಯಲ್ಲಿ ಇಸ್ರೇಲ್ ಮಿಲಿಟರಿ ಪಡೆ ನಡೆಸುತ್ತಿರುವ ಕಾರ್ಯಾಚರಣೆ ಕುರಿತಂತೆ ಈವರೆಗೂ ಕೇಂದ್ರ ಸರ್ಕಾರ ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ. ಕೇಂದ್ರ ಸರ್ಕಾರದ ಈ ಕ್ರಮದಿಂದ ಇಸ್ರೇಲ್ ಮತ್ತು ಪ್ಯಾಲೆಸ್ಟೀನ್ ಪ್ರದೇಶಗಳಲ್ಲಿ ನೆಲೆಸಿರುವ ಭಾರತೀಯ ಪ್ರಜೆಗಳು ಅತಂತ್ರ ಸ್ಥಿತಿಗೆ ಸಿಲುಕುವಂತಾಗಿದೆ. ಹೀಗಾಗಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಈ ಕೂಡಲೇ ತನ್ನ ನಿಲುವು ಪ್ರಕಟಿಸಬೇಕು ಎಂದು ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪಕ್ಷ ಆಗ್ರಹಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಇತರೆ ವಿಪಕ್ಷಗಳು ಸಾಥ್ ನೀಡಿದ್ದು, ಕೇಂದ್ರ ಸರ್ಕಾರ ಈ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿವೆ. ವಿಪಕ್ಷಗಳ ಗದ್ದಲ ತಾರಕಕ್ಕೇರುತ್ತಿದ್ದಂತೆಯೇ ಸಭಾಧ್ಯಕ್ಷ ಹಮೀದ್ ಅನ್ಸಾರಿ ಅವರು ಕಲಾಪವನ್ನು ನಾಳೆಗೆ ಮುಂದೂಡಿದ್ದಾರೆ.
ಚರ್ಚೆಗೆ ಸುಷ್ಮಾ ಹಿಂದೇಟು
ಈ ಹಿಂದೆ ಗಾಜಾಪಟ್ಟಿಯಲ್ಲಿನ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು, ಗಾಜಾಪಟ್ಟಿ ಹಿಂಸಾಚಾರ ಪ್ರಕರಣ ನಮ್ಮ ದೇಶದ ಆಂತರಿಕ ವಿಚಾರವಲ್ಲ. ಇಸ್ರೇಲ್ ದೇಶದ ಆಂತರಿಕ ವಿಚಾರವಾಗಿದ್ದು, ಮಧ್ಯಪ್ರವೇಶದಿಂದ ಎರಡು ದೇಶಗಳ ನಡುವಿನ ಬಾಂಧವ್ಯಕ್ಕೆ ತೊಂದರೆಯಾಗುತ್ತದೆ. ಈ ವಿಚಾರ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಮಾತುಕತೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹೇಳಿದರು.
ಆದರೆ ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ಟೀಕಿಸಿರುವ ಕಾಂಗ್ರೆಸ್ ನಾಯಕರು, ಕೇಂದ್ರ ಸರ್ಕಾರ ನುಣುಚಿಕೊಳ್ಳುವ ಯತ್ನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.