ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ರಾಜ್ಯದಲ್ಲಿ ಪೊಲೀಸ್ ನೈತಿಕಗಿರಿ: ಡಿವಿಎಸ್ ಎಚ್ಚರಿಕೆ

ಅತ್ಯಾಚಾರ ಪ್ರಕರಣ ಹೆಚ್ಚಳ ಕುರಿತು..

Srinivasa Murthy VN
Updated On : 19 Jul 2014, 3:58 am

ಅತ್ಯಾಚಾರ ಪ್ರಕರಣ ಹೆಚ್ಚಳ ಕುರಿತು ರಾಜ್ಯ ಸರ್ಕಾರದ ವಿರುದ್ಧ ಸದಾನಂದಗೌಡ ತೀವ್ರ ಅಸಮಾಧಾನ
ಬೆಂಗಳೂರು:
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ತೀರ ಹದಗೆಟ್ಟಿದ್ದು, ಹೀಗೆ ಮುಂದುವರೆದರೆ ನೈತಿಕ ಪೊಲೀಸ್‌ಗಿರಿ ಅನಿವಾರ್ಯವಾಗುತ್ತದೆ ಎಂದು ಕೇಂದ್ರ ರೈಲ್ವೇ ಸಚಿವ ಡಿ.ವಿ.ಸದಾನಂದಗೌಡ ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಹೆಚ್ಚಾಗುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯದ ಹಿನ್ನಲೆಯಲ್ಲಿ ಮಾತನಾಡಿದ ಡಿ.ವಿ.ಸದಾನಂದಗೌಡ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ತೀರ ಹದಗೆಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯದ ಜನತೆಯ ಬಗ್ಗೆ ಕೊಂಚವೂ ಕಾಳಜಿ ಇಲ್ಲದಂತಾಗಿದೆ ಎಂದು ಹೇಳಿದರು.

ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಧಟತನದಿಂದ ವರ್ತಿಸುತ್ತಿದ್ದು, ರಾಜ್ಯ ಸರ್ಕಾರ ಆನೆ ನಡೆದಿದ್ದೇ ಹಾದಿ ಎಂಬಂತೆ ವರ್ತಿಸುತ್ತಿದೆ. ಪರಿಸ್ಥಿತಿ ಹೀಗೆಯೇ ಮುಂದುವರೆದರೆ ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ ಅನಿವಾರ್ಯವಾಗುತ್ತದೆ ಎಂದು ಸದಾನಂದಗೌಡ ಅವರು ಎಚ್ಚರಿಕೆ ನೀಡಿದರು.

ದಿನಕಳೆದಂತೆ ರಾಜ್ಯದಲ್ಲಿ ಅತ್ಯಾಚಾರ, ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಗಳಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು, ವಿಧಾನಸಭೆಯ ಉಭಯ ಕಲಾಪಗಳಲ್ಲಿ ಈ ಬಗ್ಗೆ ಬಿಸಿ ಬಿಸಿ ಚರ್ಚೆಗಳು ನಡೆಯುತ್ತಿವೆ. ಇದೇ ವಿಚಾರ ಈ ಹಿಂದಿನ ಕಲಾಪದಲ್ಲಿ ಆಡಳಿತಾ ರೂಢ ಕಾಂಗ್ರೆಸ್ ಮತ್ತು ವಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿತ್ತು. ಒಂದು ಹಂತದಲ್ಲಿಯಂತೂ ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ವರ್ತನೆಯಿಂದ ಆಕ್ರೋಶಿತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ವಾಗ್ದಾಳಿಯನ್ನೇ ನಡೆಸಿದರು.

ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಿಜೆಪಿ ವಿರುದ್ಧ ತೀವ್ರವಾಗಿ ಹರಿಹಾಯ್ದರು. 'ಸದನದಲ್ಲಿ ಬ್ಲೂಫಿಲಂ ನೋಡಿದವರು, ಸ್ನೇಹಿತನ ಹೆಂಡತಿಯ ಮೇಲೆಯೇ ಅತ್ಯಾಚಾರ ನಡೆಸಿದವರು ಮತ್ತು ಹೆಂಡಿತಿಯನ್ನೇ ಕೊಂದ ಆರೋಪ ಹೊತ್ತವರು ನಿಮ್ಮ ಪಕ್ಷದಲ್ಲಿದ್ದಾರೆ. ಹೀಗಿರುವಾಗ ನಮ್ಮ ಮೇಲೆ ಆರೋಪ ಹೊರಿಸಲು ನಿಮಗಾವ ನೈತಿಕತೆ ಇದೆ. ನೀವು ಸ್ಪೀಕರ್ ಆಗಿದ್ದಾಗ ಸದನದಲ್ಲಿ ಬ್ಲೂ ಫಿಲಂ ನೋಡಿದವರ ವಿರುದ್ಧ ಯಾವ ಕ್ರಮ ಕೈಗೊಂಡಿರಿ ಎಂದು ಪ್ರಶ್ನಿಸಿದ್ದರು.

ಇದೀಗ ಇದೇ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರವನ್ನು ಹಾಲಿ ಕೇಂದ್ರ ರೇಲ್ವೇ ಸಚಿವ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement