ಅತ್ಯಾಚಾರ ತಡೆಗೆ ಸಮಿತಿ ರಚನೆ: ಸಿದ್ದರಾಮಯ್ಯ
ಅತ್ಯಾಚಾರ ತಡೆ ಸಂಬಂಧ ಉನ್ನತ ಮಟ್ಟದ ಸಮಿತಿ ರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಹೇಳಿದ್ದಾರೆ.
ಬೆಂಗಳೂರು: ಅತ್ಯಾಚಾರ ತಡೆ ಸಂಬಂಧ ಉನ್ನತ ಮಟ್ಟದ ಸಮಿತಿ ರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಹೇಳಿದ್ದಾರೆ.
ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ಬಂದ್ ನಡೆಸುದ್ದು, ನಂತರ ಸಂಘಟನೆಯ ಅಧ್ಯಕ್ಷರು ರ್ಯಾಲಿ ಮೂಲಕ ವಿಧಾನಸೌಧಕ್ಕೆ ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಬಳಿಕ ಮಾತನಾಡಿದ ಸಿದ್ದರಾಮಯ್ಯ ಅವರು, ಅತ್ಯಾಚಾರ ತಡೆ ಸಂಬಂಧ ಉನ್ನತ ಮಟ್ಟದ ಸಮಿತಿ ರಚನೆ ಮಾಡಲಾಗುವುದು. ಎಂ.ಸಿ. ನಾಣಯ್ಯ ನೇತೃತ್ವದಲ್ಲಿ ಸಮಿತಿ ರಚಿಸಿ, ಸಮಿತಿ ನೀಡುವ ವರದಿ ಆಧಾರದ ಮೇಲೆ ಅತ್ಯಾಚಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಸದ್ಯ ಅತ್ಯಾಚಾರಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗುತ್ತಿದ್ದು, ಗೂಂಡಾ ಕಾಯ್ದೆಯಡಿ ಬಂದಿಸುವ ಅತ್ಯಾಚಾರಿಗಳಿಗೆ ಒಂದು ವರ್ಷದ ತನಕ ಜಾಮೀನು ಸಿಗುವುದಿಲ್ಲ ಎಂದು ತಿಳಿಸಿದ್ದಾರೆ.
ಬೆಂಗಳೂರು ಬಂದ್ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ವರದಿಯಾಗಿಲ್ಲ. ಬೆಂಗಳೂರು ಬಂದ್ ಬಹುತೇಕ ಶಾಂತಿಯುತವಾಗಿದ್ದು, ಕನ್ನಡ ಪರ ಸಂಘಟನೆಗಳು ಬಂದ್ ನಡೆಸುತ್ತಿರುವುದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಹೊರತು ಸರ್ಕಾರದ ವಿರುದ್ಧವಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳಗಾವಿಯಲ್ಲಿ ಎಂಇಎಸ್ ಸಂಘಟನೆಯ ಕಾರ್ಯಕರ್ತರ ಪುಂಡಾಟಿಕೆ ಹಾಗೂ ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.