ಅತ್ಯಾಚಾರ ತಡೆಗಟ್ಟಲು ಕೇಂದ್ರ ಕ್ರಮ: ಬಿಜೆಪಿ
ಬದೌನ್‌ನಲ್ಲಿ ಇಬ್ಬರು ಹದಿಹರೆಯದ ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಹತ್ಯೆಗೈದ ಪ್ರಕರಣವನ್ನು ...
ನವದೆಹಲಿ: ಬದೌನ್‌ನಲ್ಲಿ ಇಬ್ಬರು ಹದಿಹರೆಯದ ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಹತ್ಯೆಗೈದ ಪ್ರಕರಣವನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಸೋಮವಾರ ಉತ್ತರಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದ್ದಾರೆ.
ಅದೇ ವೇಳೆ ಉತ್ತರಪ್ರದೇಶದ ರಾಜ್ಯಪಾಲ ಬಿ ಎಲ್ ಜೋಷಿ ಅವರು ರಾಜ್ಯದಲ್ಲಿನ ಘಟನಾವಳಿಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ವರದಿ ಕಳಿಸಿದರೆ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸುವುದಾಗಿ ಬಿಜೆಪಿ ಹೇಳಿದೆ.
ಉ.ಪ್ರದೇಶ ಮುಖ್ಯಮಂತ್ರಿಯವರ ನಿವಾಸದೆದುರು ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಜಲ ಫಿರಂಗಿ ಪ್ರಯೋಗ ನಡೆಸಿದ್ದಾರೆ. ಕಾರ್ಯಕರ್ತರನ್ನು ತಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
ಪ್ರತಿಭಟನೆಯ ವೇಳೆ ಮಹಿಳಾ ಮೋರ್ಚಾ ಕಾರ್ಯಕರ್ತರು ಮುಖ್ಯಮಂತ್ರಿಗೆ ಬಳೆ ತೋರಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉ.ಪ್ರದೇಶದಲ್ಲಿನ ಆಡಳಿತರೂಢ ಸಮಾಜವಾದಿ ಪಕ್ಷದ ವಿರುದ್ಧ ಕಿಡಿಕಾರಿದ ಬಿಜೆಪಿ, ರಾಜ್ಯದಲ್ಲಿ ಕಾನೂನು ಮತ್ತು ನಿಯಮಗಳ ಉಲ್ಲಂಘನೆ ನಡೆಯುತ್ತಲೇ ಇದೆ ಎಂದು ದೂರಿದ್ದಾರೆ.