ಒಡಿಶಾಗೆ ವಿಶೇಷ ಸ್ಥಾನಮಾನಕ್ಕೆ ಪಟ್ನಾಯಕ್ ಒತ್ತಾಯ
ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಡ ಸೇರುವ...
ನವದೆಹಲಿ: ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಡ ಸೇರುವ ಪ್ರಸ್ತಾಪವನ್ನು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಸ್ಪಷ್ಟವಾಗಿ ತಳ್ಳಿಹಾಕಿದ್ದು, ಒಡಿಶಾಗೆ ವಿಶೇಷ ಸ್ಥಾನಮಾನ ನೀಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸೋಮವಾರ ಒತ್ತಾಯಿಸಿದ್ದಾರೆ.
ಮೋದಿ ಪ್ರಧಾನಿಯಾದ ನಂತರ ಇಂದು ಮೊದಲ ಬಾರಿಗೆ ಅವರನ್ನು ಭೇಟಿ ಮಾಡಿದ ಪಟ್ನಾಯಕ್, ಒಡಿಶಾಗೆ ವಿಶೇಷ ಸ್ಥಾನಮಾನ ನೀಡುವಂತೆ ಮನವಿ ಮಾಡಿದರು. ಪಟ್ನಾಯಕ್ ಅವರಿಗೆ ಬಿಜೆಡಿಯ 24 ಸಂಸದರು ಸಾಥ್ ನೀಡಿದರು. ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಡಿ ಒಡಿಶಾದಲ್ಲಿ 21 ಸ್ಥಾನಗಳ ಪೈಕಿ 20 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇನ್ನು ರಾಜ್ಯಸಭೆಯಲ್ಲೂ ನಾಲ್ವರು ಸಂಸದರು ಬಿಜೆಡಿ ಹೊಂದಿದೆ.
ಪ್ರಧಾನಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪಟ್ನಾಯಕ್, ಒಡಿಶಾಗೆ ವಿಶೇಷ ಸ್ಥಾನಮಾನ ನೀಡುವುದು ಸೇರಿದಂತೆ ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಬೇಡಿಕೆಗಳೊಂದಿಗೆ ನಾನು ಇಂದು ಪ್ರಧಾನಿ ಅವರನ್ನು ಭೇಟಿ ಮಾಡಿ, ಚರ್ಚಿಸಿದ್ದೇನೆ. ಪ್ರಧಾನಿಗಳು ಸಹ ನಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂಧಿಸಿದ್ದಾರೆ. ಆದರೆ ಈ ವೇಳೆ ಎನ್ಡಿಎ ಸೇರುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಬಿಜೆಡಿ ಮುಖ್ಯಸ್ಥ ತಿಳಿಸಿದರು.