ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಪಟ್ಟಿಯಲ್ಲಿ ಎಸ್.ಎಂ. ಕೃಷ್ಣ, ಹರಿಪ್ರಸಾದ್‌ಗೆ ಸ್ಥಾನ
ರಾಜ್ಯಸಭೆ ಮತ್ತು ವಿಧಾನಪರಿಷತ್ ಚುನಾವಣೆಗೆ ಸಿದ್ಥತೆ ನಡೆಸಿರುವ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಗುರುವಾರ ಅಂತಿಮಗೊಳಿಸಿದೆ.
ನವದೆಹಲಿ: ರಾಜ್ಯಸಭೆ ಮತ್ತು ವಿಧಾನಪರಿಷತ್ ಚುನಾವಣೆಗೆ ಸಿದ್ಥತೆ ನಡೆಸಿರುವ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಗುರುವಾರ ಅಂತಿಮಗೊಳಿಸಿದೆ.
ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಕಾಂಗ್ರೆಸ್ ಮುಖಂಡ ಬಿ.ಕೆ ಹರಿಪ್ರಸಾದ್ ಹಾಗೂ ಚನ್ನಾರೆಡ್ಡಿ ಅವರ ಹೆಸರುಗಳನ್ನು ಅಂತಿಮಗೊಳಿಸಿದೆ.
ಇದೇ ವೇಳೆ, ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಗೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್, ಎಚ್. ಎಂ ರೇವಣ್ಣ, ರಾಣಿ ಸತೀಶ್ ಅವರ ಹೆಸರನ್ನು ಆಯ್ಕೆ ಮಾಡಿರುವುದಾಗಿ ಕಾಂಗ್ರೆಸ್ ಉನ್ನತ ಮೂಲಗಳಿಂದ ತಿಳಿದುಬಂದಿದೆ. ನಾಲ್ಕನೇ ಸ್ಥಾನಕ್ಕಾಗಿ ನಿವೇದಿತ ಆಳ್ವ ಮತ್ತು ಐವಾನ್ ಡಿಸೋಜಾ ಅವರ ಹೆಸರಗಳು ಪರಿಶೀಲನೆಯಲ್ಲಿದೆ.
ಇದೇ ಜೂನ್ ಅಂತ್ಯಕ್ಕೆ ವಿಧಾನಪರಿಷತ್‌ಗೆ ನಾಮಕರಣಗೊಂಡಿರುವ ನಾಲ್ವರು ಸದಸ್ಯರು ನಿವೃತ್ತರಾಗುತ್ತಿದ್ದು, ಈ ಸ್ಥಾನಗಳಿಗೆ ಅಭ್ಯರ್ಥಿಗಳ ಆಯ್ಕೆಗೂ ಕಸರತ್ತು ನಡೆದಿದೆ. ಸಾಹಿತ್ಯ ಕ್ಷೇತ್ರದಿಂದ ಡಾ. ಹೆಚ್. ಮರಳುಸಿದ್ದಪ್ಪ ಮತ್ತು ಚಿತ್ರೋದ್ಯಮ ಕ್ಷೇತ್ರದಿಂದ ಹಿರಿಯ ನಟಿ ಜಯಮಾಲಾ ಅವರ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ.
ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿಧಾನಪರಿಷತ್ ಮತ್ತು ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಈ ಸಭೆಯಲ್ಲಿ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು. ಅಂತಿಮಗೊಂಡಿರುವ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಜೂ. 7ರಂದು ಸೋನಿಯಾ ಗಾಂಧಿ ಅವರು ಬಿಡುಗಡೆ ಮಾಡಲಿದ್ದಾರೆ.