ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕಾವೇರಿ ನಿರ್ವಹಣಾ ಮಂಡಳಿಗೆ ಸಿಎಂ ವಿರೋಧ: ಜೂ.9ಕ್ಕೆ ಸರ್ವಪಕ್ಷ ಸಭೆ

ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಮುಂದಾಗಿರುವ ಕೇಂದ್ರ ಸರ್ಕಾರದ ನಿರ್ಧಾರ ಸರಿಯಲ್ಲ ಎಂದು ಮುಖ್ಯಮಂತ್ರಿ...

Lingaraj Badiger
Updated On : 6 Jun 2014, 1:11 am

ಬೆಂಗಳೂರು: ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಮುಂದಾಗಿರುವ ಕೇಂದ್ರ ಸರ್ಕಾರದ ನಿರ್ಧಾರ ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕಾವೇರಿ ವಿವಾದ ಸದ್ಯ ಸುಪ್ರೀಂ ಕೋರ್ಟ್‌ನಲ್ಲಿದೆ ಮತ್ತು ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕೋರ್ಟ್ ಈಗಾಗಲೇ ಒಂದು ಸಮಿತಿ ರಚಿಸಿದೆ. ಈಗ ಮತ್ತೊಂದು ಮಂಡಳಿ ರಚಿಸುವುದು ಸರಿಯಲ್ಲ ಎಂದು ಹೇಳಿದರು.

ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸಂಪುಟ ಕಾವೇರಿ ಜಲ ನಿರ್ವಹಣಾ ಮಂಡಳಿ ರಚಿಸುವ ಬಗ್ಗೆ ಟಿಪ್ಪಣಿ ಸಿದ್ಧಪಡಿಸಿದೆ. ಆದರೆ ನಿರ್ವಹಣಾ ಮಂಡಳಿ ರಚನೆ ಬೇಡ ಎಂದು ನಾನು ಸಹ ಪ್ರಧಾನಿಗೆ ಮನವಿ ಮಾಡಿದ್ದೇನೆ ಎಂದು ಸಿಎಂ ತಿಳಿಸಿದರು.

ಈ ಸಂಬಂಧ ಜೂನ್ 9ಕ್ಕೆ ಸರ್ವ ಪಕ್ಷ ಸಭೆ ಕರೆದಿದ್ದು, ಜೂನ್ 10ರಂದು ಸರ್ವಪಕ್ಷ ನಿಯೋಗದೊಂದಿಗೆ ದೆಹಲಿಗೆ ತೆರಳಿ ರಾಜ್ಯದ ಸಂಸದರು, ಕೇಂದ್ರ ಸಚಿವರೊಂದಿಗೆ ಚರ್ಚಿಸುತ್ತೇವೆ. ನಂತರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ನಿರ್ವಹಣಾ ಮಂಡಳಿ ರಚನೆ ಬೇಡ ಎಂದು ಮನವಿ ಮಾಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.

ಇನ್ನು ಈ ಬಗ್ಗೆ ದೆಹಲಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ಆ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಬಿಟ್ಟ ವಿಚಾರ ಎಂದಿದ್ದಾರೆ.

ಕಾವೇರಿ ಐತೀರ್ಪಿನ ಅನುಷ್ಠಾನಕ್ಕಾಗಿ ಕಾವೇರಿ ನಿರ್ವಹಣಾ ಮಂಡಳಿ ರಚಿಸಬೇಕು ಹಾಗೂ ಮುಲ್ಲಪೆರಿಯಾರ್‌ ಅಣೆಕಟ್ಟೆ ಎತ್ತರಕ್ಕೆ ಕ್ರಮ ಜರುಗಿಸಬೇಕು ಎಂಬ ಜಯಲಲಿತಾ ಅವರ ಬೇಡಿಕೆ ಸಂಬಂಧ ಎರಡು ಕರಡು ಟಿಪ್ಪಣಿಗಳು ತಯಾರಾಗಿವೆ ಎನ್ನಲಾಗಿದೆ.

ವಿಶೇಷವೆಂದರೆ, ಜಯಲಲಿತಾ ಅವರು ಮೋದಿ ಅವರನ್ನು ಭೇಟಿ ಮಾಡಿದ್ದು ಮಂಗಳವಾರ. ಬುಧವಾರದ ಹೊತ್ತಿಗೆ ಈ ಟಿಪ್ಪಣಿ ತಯಾರಾಗಿದೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನೀರು ನಿರ್ವಹಣಾ ಮಂಡಳಿ ಸ್ಥಾಪಿಸಬೇಡಿ ಎಂದು ಮೋದಿ ಅವರಲ್ಲಿ ಮನವಿ ಮಾಡಿಕೊಂಡಿದ್ದು ಕೂಡ ಬುಧವಾರವೇ ಎಂಬುದು ಗಮನಾರ್ಹ.

ಕಾವೇರಿ ಐತೀರ್ಪಿನ ಕುರಿತು ಸುಪ್ರೀಂಕೋರ್ಟ್‌ನಲ್ಲಿ ವ್ಯಾಜ್ಯ ನಡೆಯುತ್ತಿದ್ದು, ಅದರ ತೀರ್ಪು ಹೊರಬರುವವರೆಗೂ ನಿರ್ವಹಣಾ ಮಂಡಳಿ ರಚನೆ ಬೇಡ ಎಂದು ಸಿದ್ದರಾಮಯ್ಯ ಅವರು ಪ್ರಧಾನಿಗಳಿಗೆ ಮನವಿ ಅರ್ಪಿಸಿದ್ದರು. ಆದರೆ ಕೇಂದ್ರ ಸರ್ಕಾರ ಈ ಕೋರಿಕೆಗೆ ಮನ್ನಣೆ ನೀಡಿದಂತಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement