ಕಾಶ್ಮೀರ ಭೇಟಿಯ ಹಿಂದೆ ರಾಜಕೀಯ ಉದ್ದೇಶವಿಲ್ಲ: ಜೇಟ್ಲಿ
ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿರುವುದರ ಹಿಂದೆ ಯಾವುದೇ ರಾಜಕೀಯ...
ಶ್ರೀನಗರ: ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿರುವುದರ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ರಕ್ಷಣಾ ಸಚಿವ ಅರುಣ್ ಜೇಟ್ಲಿ ಭಾನುವಾರ ಹೇಳಿದ್ದಾರೆ.
ರಾಜ್ಯದಲ್ಲಿ ಶಾಂತಿಯುತ ವಾತಾವರಣಕ್ಕಾಗಿ ಹಾಗೂ ಭದ್ರತಾ ಪರಿಸ್ಥಿತಿ ತಿಳಿದುಕೊಳ್ಳುಲು ಶ್ರೀನಗರಕ್ಕೆ ಭೇಟಿ ನೀಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ಸದ್ಯದಲ್ಲೇ ಅಮರಾನಾಥ ಯಾತ್ರೆ ಆರಂಭವಾಗುವುದರಿಂದ ಅದರ ಭದ್ರತಾ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಶಾಂತಿಯುತವಾಗಿ ಚುನಾವಣೆ ನಡೆದ ಮಾದರಿಯಲ್ಲೇ, ಯಾತ್ರೆಯು ಶಾಂತಿಯುತವಾಗಿ ನಡೆಯಬೇಕು ಎಂದು ಆಶೀಸುತ್ತೇನೆ ಎಂದು ಜೇಟ್ಲಿ ಹೇಳಿದ್ದಾರೆ.
ಪ್ರತ್ಯೇಕತಾ ವಾದಿಗಳೊಂದಿಗೆ ಸರ್ಕಾರ ಮಾತುಕತೆ ನಡೆಸುತ್ತದೇಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಯಿಸಿದ ಜೇಟ್ಲಿ, ಭಾರತದ ಸಂವಿಧಾನ ಮತ್ತು ಐಕ್ಯತೆಯನ್ನು ಯಾರು ಗೌರವಿಸುತ್ತಾರೋ ಅವರೊಂದಿಗೆ ಸರ್ಕಾರ ಮಾತುಕತೆ ನಡೆಸುತ್ತದೆ ಎಂದು ಅವರು ತಿಳಿಸಿದ್ದಾರೆ.
ಜಮ್ಮು ಕಾಶ್ಮೀರದ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಶ್ರಮಿಸಲಿದೆ ಎಂದು ಜೇಟ್ಲಿ ಭರವಸೆ ನೀಡಿದ್ದಾರೆ.
ಭಾರತೀಯ ಸೇನಾ ಪಡೆ, ಪೊಲೀಸ್ ಪಡೆ ಹಾಗೂ ಅರೆ ಸೈನಿಕ ದಳ ಸೇರಿದಂತೆ ಗುಪ್ತಚರ ಅಧಿಕಾರಿಗಳನ್ನು ಅರುಣ್ ಜೇಟ್ಲಿ ಭೇಟಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.