ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮುಖ್ಯಮಂತ್ರಿಗಳ ಬದಲಾವಣೆಗೆ ಮುಂದಾದ "ಕೈ"

ಲೋಕಸಭಾ ಚುನಾವಣೆಯಲ್ಲಿನ ಸೋಲಿನ ಹಿನ್ನಲೆಯಲ್ಲಿ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳನ್ನು ಬದಲಾವಣೆ ಮಾಡಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ.

Srinivasa Murthy VN
Updated On : 21 Jun 2014, 7:21 am

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿನ ಸೋಲಿನ ಹಿನ್ನಲೆಯಲ್ಲಿ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳನ್ನು ಬದಲಾವಣೆ ಮಾಡಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ.

ಅಸ್ಸಾಂ, ಮಹಾರಾಷ್ಟ್ರ ಮತ್ತು ಹರ್ಯಾಣ ರಾಜ್ಯಗಳ ಮುಖ್ಯಮಂತ್ರಿಗಳ ಬದಲಾವಣೆಗೆ ಕಾಂಗ್ರೆಸ್ ಪಕ್ಷದ ಮುಖಂಡರು ತೀರ್ಮಾನಿಸಿದ್ದಾರೆ ಎನ್ನಲಾಗುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಸಾಧನೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ತನ್ನ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಬದಲಾವಣೆಗೆ ನಿರ್ಧರಿಸಿತ್ತು. ಲೋಕಸಭಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಅಸ್ಸಾಂ ಮುಖ್ಯಮಂತ್ರಿ ತರುಣ್ ಗಗೋಯ್ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾಗಿದ್ದರು.

ಆಗ ಅವರ ಮನವೊಲಿಕೆ ಮಾಡಿದ್ದ ಕಾಂಗ್ರೆಸ್ ಹೈಕಮಾಂಡ್ ಇದೀಗ ಅವರ ಬದಲಾವಣೆಗೆ ಮುಂದಾಗಿದೆ. ಅಸ್ಸಾಂನಲ್ಲಿ ಪ್ರಸ್ತುತ ಕಾಂಗ್ರೆಸ್ 78 ಶಾಸಕರನ್ನು ಹೊಂದಿದ್ದು, ಈ ಪೈಕಿ 45 ಶಾಸಕರು ನಾಯಕತ್ವ ಬದಲಾವಣೆಗೆ ಬಯಸಿದ್ದಾರೆ ಎಂದು ತಿಳಿದುಬಂದಿದೆ. ಇತ್ತ ಮಹಾರಾಷ್ಟ್ರ ರಾಜ್ಯದಲ್ಲಿಯೂ ಪರಿಸ್ಥಿತಿ ಭಿನ್ನವಾಗಿಯೇನೂ ಇಲ್ಲ. ಕಾಂಗ್ರೆಸ್ ಪಕ್ಷದ ಭದ್ರಕೋಟೆ ಎಂದು ಬಿಂಬಿಸಲಾಗುತ್ತಿದ್ದ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲುಕಂಡಿತ್ತು.

ಹೀಗಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹ್ವಾಣ್ ಅವರ ಬದಲಾವಣೆಗೆ ಕಾಂಗ್ರೆಸ್ ಪಕ್ಷ ಮುಂದಾಗಿದೆ. ಈಗಾಗಲೇ ಈ ಬಗ್ಗೆ ಒಂದು ಸುತ್ತಿನ ಮಾತುಕತೆ ಮುಕ್ತಾಯಗೊಂಡಿದ್ದು, ಮಾಜಿ ಕೇಂದ್ರ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರು ತಾವು ಮುಖ್ಯಮಂತ್ರಿ ಸ್ಥಾನ ವಹಿಸಿಕೊಳ್ಳುವುದಾಗಿ ತಿಳಿಸಿದ್ದಾರೆ. ಆದರೆ ಹಾಲಿ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹ್ವಾಣ್ ಅವರು ಮಾತ್ರ ತಮ್ಮ ಸ್ಥಾನ ತ್ಯಜಿಸದೇ ಇರಲು ತೀರ್ಮಾನಿಸಿದ್ದಾರೆ.

ಈ ಕುರಿತು ಈಗಾಗಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹ್ವಾಣ್ ಅವರು ನವದೆಹಲಿಯಲ್ಲಿ ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ನವದೆಹಲಿಯ 10 ಜನಪತ್ ನಿವಾಸದಲ್ಲಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿರುವ ಪೃಥ್ವಿರಾಜ್ ಚೌಹ್ವಾಣ್ ಅವರು ತಮ್ಮ ಮುಂದಿನ ರಾಜಕೀಯ ನಡೆ ಕುರಿತು ಚರ್ಚಿಸಿದ್ದಾರೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಸ್ತುತ ವಿದೇಶಿ ಪ್ರವಾಸದಲ್ಲಿದ್ದು, ಇದೇ 28ರಂದು ಅವರು ಭಾರತಕ್ಕೆ ವಾಪಸ್ ಆಗಲಿದ್ದಾರೆ. ಅವರು ಬಂದ ಬಳಿಕ ಮುಖ್ಯಮಂತ್ರಿಗಳ ಬದಲಾವಣೆ ಪ್ರಕರಣದ ಸಂಪೂರ್ಣ ಚಿತ್ರಣ ದೊರೆಯುವ ಸಾಧ್ಯತೆ ಇದೆ.

ಒಟ್ಟಾರೆ ಲೋಕಸಭಾ ಚುನಾವಣೆಯ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ಪಕ್ಷ ಇದೀಗ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement