ತರುಣ್ ತೇಜ್ಪಾಲ್ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ
ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ...
ನವದೆಹಲಿ: ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ತೆಹಲ್ಕಾ ಮಾಜಿ ಪ್ರಧಾನ ಸಂಪಾದಕ ತರುಣ್ ತೆಜ್ಪಾಲ್ ಅವರ ಮಧ್ಯಂತರ ಜಾಮೀನು ಅವಧಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಜುಲೈ 1ರವರೆಗೆ ವಿಸ್ತರಿಸಿದೆ.
ತಮಗೆ ನೀಡಲಾಗಿರುವ ಮಧ್ಯಂತರ ಜಾಮೀನಿನ ಅವಧಿಯನ್ನು ಮತ್ತಷ್ಟು ವಿಸ್ತರಿಸುವಂತೆ ಕೋರಿ ತರುಣ್ ತೇಜ್ಪಾಲ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಜಾಮೀನು ಅವಧಿಯನ್ನು ವಿಸ್ತರಿಸಿ ಆದೇಶಿಸಿದೆ.
ತಮ್ಮ ತಾಯಿ ತೀರಿಹೋಗಿರುವುದರಿಂದ ಮನೆಯಲ್ಲಿ ತಮ್ಮ ಉಪಸ್ಥಿತಿ ಅವಶ್ಯಕವಾಗಿದ್ದು, ತಮಗೆ ಆರು ವಾರಗಳವರೆಗೆ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸಬೇಕು ಎಂದು ತೇಜ್ಪಾಲ್ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದ್ದರು.
ಮೇ 19ರಂದು ತಾಯಿಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವ ನಿಟ್ಟಿನಲ್ಲಿ ತರುಣ್ ತೇಜ್ಪಾಲ್ ಅವರಿಗೆ ಸುಪ್ರೀಂ ಕೋರ್ಟ್ ಮೂರು ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.