ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ನಾನಲ್ಲ.. ಕಾಂಗ್ರೆಸ್ ಸರ್ಕಾರ ಅವಧಿ ಪೂರ್ಣಗೊಳಿಸಲಿದೆ: ಸಿಎಂ ಸಿದ್ದು

ನಾನು 5 ವರ್ಷ ಅಧಿಕಾರ ಪೂರ್ಣಗೊಳಿಸುತ್ತೇನೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಖಂಡಿತಾವಾಗಿಯೂ ಕಾಂಗ್ರೆಸ್ ಸರ್ಕಾರ ತನ್ನ 5 ವರ್ಷಗಳ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಿದೆ..

Srinivasa Murthy VN
Updated On : 29 Jun 2014, 7:08 am

ಬೆಂಗಳೂರು: ನಾನು 5 ವರ್ಷ ಅಧಿಕಾರ ಪೂರ್ಣಗೊಳಿಸುತ್ತೇನೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಖಂಡಿತಾವಾಗಿಯೂ ಕಾಂಗ್ರೆಸ್ ಸರ್ಕಾರ ತನ್ನ 5 ವರ್ಷಗಳ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿನ್ನೆಯಿಂದ ನಡೆಯುತ್ತಿರುವ ಕಾಂಗ್ರೆಸ್ ಆತ್ಮಾವಲೋಕನ ಸಭೆಯಲ್ಲಿ ಇಂದು ಸಿದ್ದರಾಮಯ್ಯ ಅವರು ಈ ಹೇಳಿಕೆ ನೀಡಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನವನ್ನು ಉಂಟುಮಾಡಿದೆ. ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್ ಪಕ್ಷ, ಈ ಹಿಂದೆ ತನ್ನ ಮುಖ್ಯಮಂತ್ರಿಗಳ ಬದಲಾವಣೆಗೆ ಮುಂದಾಗಿತ್ತು. ಇದರ ಮೊದಲ ಭಾಗವಾಗಿ ಅಸ್ಸಾಂ ಮುಖ್ಯಮಂತ್ರಿ ತರುಣ್ ಗಗೋಯ್ ಅವರು ತಮ್ಮ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಲು ಮುಂದಾಗಿದ್ದರು.

ಕಾಂಗ್ರೆಸ್ ಪಕ್ಷದ ನಡೆ ಕುರಿತು ಮಾಧ್ಯಮಗಳಲ್ಲಿ ಪ್ರಸಾರವಾದ ಟೀಕೆಯಿಂದಾಗಿ ಎಚ್ಚೆತ್ತ 'ಹೈಕಮಾಂಡ್‌' ಗಗೋಯ್ ಅವರ ರಾಜಿನಾಮೆ ಪ್ರಸ್ತಾಪವನ್ನು ತಿರಸ್ಕರಿಸಿತ್ತು. ಆದರೆ ಮೂಲಗಳ ಪ್ರಕಾರ ಕಾಂಗ್ರೆಸ್ ಪಕ್ಷ ಆಗ ತನ್ನ ನಿರ್ಧಾರವನ್ನು ಸ್ಥಗಿತಗೊಳಿಸರಬಹುದು. ಆದರೆ ಈಗಲೂ ಕಾಂಗ್ರೆಸ್ ಪಕ್ಷ ತನ್ನ ಮುಖ್ಯಮಂತ್ರಿಗಳ ರಾಜಿನಾಮೆ ಯೋಜನೆಯನ್ನು ಚಾಲ್ತಿಯಲ್ಲಿಟ್ಟಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಇಂಬು ನೀಡುತ್ತಿರುವುದು ಮಹಾರಾಷ್ಟ್ರ ರಾಜ್ಯದ ಪ್ರಸಕ್ತ ರಾಜಕೀಯ ಬೆಳವಣಿಗೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ತಾವು ಸಿದ್ಧ ಎಂದು ಹೇಳುವ ಮೂಲಕ ಮಾಜಿ ಕೇಂದ್ರ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರು ಇಂತಹುದೊಂದು ವಿವಾದಕ್ಕೆ ಮುನ್ನುಡಿ ಬರೆದಿದ್ದಾರೆ. ಅಲ್ಲದೆ ಇದೇ ವಿಚಾರವಾಗಿ ಪೃಥ್ವಿರಾಜ್ ಚೌಹ್ವಾಣ್ ಅವರು ಈ ಹಿಂದೆ ನವದೆಹಲಿಗೆ ಭೇಟಿ ನೀಡಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಇಂದಿನ ಹೇಳಿಕೆಯಿಂದಾಗಿ ರಾಜ್ಯದಲ್ಲಿಯೂ ಇಂತಹುದೇ ಪರಿಸ್ಥಿತಿ ಎದುರಾಗಿದೆಯೇ? ಎಂಬ ಪ್ರಶ್ನೆ ಮೂಡುತ್ತಿದೆ.

ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಕಾರ ಇಂದಿನ ಹೇಳಿಕೆ ಖಂಡಿತ ಕುರ್ಚಿ ಬಿಡುವ ಸೂಚನೆಯಲ್ಲವಂತೆ..!

ಕಾಂಗ್ರೆಸ್ ಮುನ್ನೆಡೆಸಲು ರಾಹುಲ್ ಗಾಂಧಿ ಅಸಮರ್ಥ-ಎಚ್.ವಿಶ್ವನಾಥ್
ಇದೇ ವೇಳೆ ಮಾತನಾಡಿದ ಮಾಜಿ ಸಂಸದ ಎಚ್.ವಿಶ್ವನಾಥ್ ಅವರು, ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುವಲ್ಲಿ ರಾಹುಲ್ ಗಾಂಧಿ ಅವರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಆತ್ಮಾವಲೋಕನ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ವಿಶ್ವನಾಥ್ ಅವರು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. 'ರಾಹುಲ್ ಗಾಂಧಿ ಇನ್ನೂ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುವಷ್ಟು ಸಮರ್ಥರಾಗಿಲ್ಲ. ಪ್ರಿಯಾಂಕಾ ಗಾಂಧಿ ಅವರಿಗೆ ಕಾಂಗ್ರೆಸ್ ಪಕ್ಷದ ಜವಾಬ್ದಾರಿ ನೀಡುವುದು ಒಳಿತು. ಪಕ್ಷವನ್ನು ಮುನ್ನಡೆಸಬಲ್ಲ ಎಲ್ಲ ಲಕ್ಷಣಗಳು ಮತ್ತು ಅರ್ಹತೆಗಳು ಪ್ರಿಯಾಂಕ ಅವರಲ್ಲಿದೆ ಎಂದು ವಿಶ್ವನಾಥ್ ಹೇಳಿದರು.

ವಿವಾದಕ್ಕೀಡಾದ ದಿಗ್ವಿಜಯ್ ಹೇಳಿಕೆ
ಇದೇ ವೇಳೆ ರಾಹುಲ್ ಗಾಂಧಿ ನಾಯಕತ್ವ ಕುರಿತು ಖಾಸಗಿ ಸುದ್ದಿವಾಹಿನಿಯೊಂದಕ್ಕೆ ದಿಗ್ವಿಜಯ್ ಸಿಂಗ್ ನೀಡಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ಹಿಂದೆ ಪಕ್ಷದ ಕಾರ್ಯಕ್ರಮ ನಿಮಿತ್ತ ಗೋವಾಕ್ಕೆ ತೆರಳಿದ್ದ ದಿಗ್ವಿಜಯ್ ಸಿಂಗ್ ಅವರು, ರಾಹುಲ್ ಗಾಂಧಿ ಅವರಿಗೆ ಪಕ್ಷವನ್ನು ಮುನ್ನಡೆಸುವ ಸಾಮರ್ಥ್ಯವಿಲ್ಲ. ನಾನು ಸಾಕಷ್ಟು ಬಾರಿ ವಿಪಕ್ಷ ನಾಯಕರಾಗುವಂತೆ ಕೇಳಿದ್ದೆ. ಆದರೆ ಅವರು ಒಪ್ಪಿಕೊಂಡಿರಲಿಲ್ಲ. ಅವರು ಆಡಳಿತ ಸ್ವಭಾವದವರಲ್ಲ. ಅನ್ಯಾಯದ ವಿರುದ್ಧ ಹೋರಾಡುವ ಸಾಮರ್ಥ್ಯ ಅವರಲ್ಲಿದೆ ಎಂದು ಹೇಳಿದ್ದರು.

ದಿಗ್ವಿಜಯ್ ಸಿಂಗ್ ಅವರ ಈ ಹೇಳಿಕೆ ಇದೀಗ ವಿವಾದಕ್ಕೆ ಆಸ್ಪದವಾಗುತ್ತಿದ್ದಂತೆಯೇ ಅವರು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ಗೋವಾದಲ್ಲಿ ನೀಡಿದ್ದ ಹೇಳಿಕೆ ಕುರಿತು ದಿಗ್ವಿಜಯ್ ಸಿಂಗ್ ಅವರು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಆತ್ಮಾವಲೋಕನ ಸಭೆಯಲ್ಲಿ ಸ್ಪಷ್ಟೀಕರಣ ನೀಡಿದ್ದಾರೆ. 'ನಾನು ಆ ಅರ್ಥದಲ್ಲಿ ಹೇಳಿಲ್ಲ. ರಾಹುಲ್ ಅವರಿಗೆ ಅನ್ಯಾಯದ ವಿರುದ್ಧ ಹೋರಾಡುವ ಮನೋಭಾವವಿದೆ. ಅವರಿಗೆ ಅಧಿಕಾರದ ಬೆನ್ನುಹತ್ತಿ ಹೋಗುವ ಮನೋಭಾವವಿಲ್ಲ. ಅದೇ ನಮ್ಮ ಮತ್ತು ಅವರ ನಡುವಿನ ವ್ಯತ್ಯಾಸ ಎಂದು ಹೇಳಿದ್ದೆ ಅಷ್ಟೇ ಎಂದು ಹೇಳಿದ್ದಾರೆ.

ಒಟ್ಟಾರೆ ಲೋಕಸಭಾ ಚುನಾವಣೆಯಲ್ಲಿನ ಸೋಲಿನ ಕುರಿತು ಆತ್ಮಾವಲೋಕನ ಮಾಡಿಕೊಳ್ಳಲು ಅರಮನೆ ಮೈದಾನದಲ್ಲಿ ಸೇರಿರುವ ಕಾಂಗ್ರೆಸ್ ನಾಯಕರು, ಇದೀಗ ತಮ್ಮ ಹೇಳಿಕೆಗಳಿಂದ ಮತ್ತಷ್ಟು ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಇದರ ಆತ್ಮಾವಲೋಕನಕ್ಕಾಗಿ ಕಾಂಗ್ರೆಸ್ ಪಕ್ಷ ಮತ್ತೊಂದು ಸಭೆ ನಡೆಸುವ ಅವಶ್ಯಕತೆ ಬರಬಹುದೇನೋ..?

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement