ಚಿಕ್ಕಬಳ್ಳಾಪುರದಿಂದ ಕೇಂದ್ರ ಸಚಿವ ವೀರಪ್ಪಮೊಯ್ಲಿ ಸ್ಪರ್ಧೆ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸ್ಪರ್ಧಿಸುತ್ತಾರೆಂಬ ಗಾಳಿ ಸುದ್ದಿಗೆ ಬ್ರೇಕ್ ಬಿದ್ದಿದ್ದು...
ನವದೆಹಲಿ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸ್ಪರ್ಧಿಸುತ್ತಾರೆಂಬ ಗಾಳಿ ಸುದ್ದಿಗೆ ಬ್ರೇಕ್ ಬಿದ್ದಿದ್ದು, ಕೇಂದ್ರ ಸಚಿವ ವೀರಪ್ಪಮೊಯ್ಲಿ ಅವರ ಹೆಸರು ಅಂತಿಮವಾಗಿದೆ.
ಇಂದು ಕಾಂಗ್ರೆಸ್ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಚಿಕ್ಕಬಳ್ಳಾಪುರದಿಂದ ವೀರಪ್ಪಮೊಯ್ಲಿ ಕಣಕ್ಕೀಳಿಯಲ್ಲಿದ್ದಾರೆ. ಇದರೊಂದಿಗೆ ರಾಹುಲ್ ಗಾಂಧಿ ಸ್ಪರ್ಧಿಸುತ್ತಾರೆ ಎಂಬ ಅಂತೆ ಕಂತೆಗಳಿಗೆ ತೆರೆ ಬಿದ್ದಿದೆ.
ಈ ಬಾರಿ ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಅವರು ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷದಿಂದ ಪ್ರಬಲ ಸ್ಪರ್ಧೆಯನ್ನು ಎದುರಿಸಬೇಕಾಗಿದ್ದು, ಮುಂಜಾಗೃತಾ ಕ್ರಮವಾಗಿ ಚಿಕ್ಕಬಳ್ಳಾಪುರದಿಂದಲೂ ಸ್ಪರ್ಧಿಸುವುದು ಸೂಕ್ತ ಎಂದು ರಾಹುಲ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ವೀರಪ್ಪ ಮೊಯಿಲಿ ಅವರೇ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಇದೇ ಕಾರಣಕ್ಕಾಗಿ ಕಾಂಗ್ರೆಸ್ ಪಕ್ಷ ಪ್ರಕಟಿಸಿರುವ ಮೊದಲ ಪಟ್ಟಿಯಲ್ಲಿ ಮೊಯಿಲಿ ಅವರ ಹೆಸರಿಲ್ಲ ಎಂದು ವಿಶ್ಲೇಷಿಸಲಾಗುತ್ತಿದೆ.