ಬೆಂಗಳೂರು ಉತ್ತರ: 'ಕೈ' ಅಭ್ಯರ್ಥಿಯಾಗಿ ನಾರಾಯಣಸ್ವಾಮಿ ಆಯ್ಕೆ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಸಂಬಂಧ ನಡೆದ ಆಂತರಿಕ..
ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಸಂಬಂಧ ನಡೆದ ಆಂತರಿಕ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಮಾಜಿ ಸಂಸದ ಸಿ.ನಾರಾಯಣಸ್ವಾಮಿ ಅವರು ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.
ಮಾಜಿ ಸಂಸದ ನಾರಾಯಣ ಸ್ವಾಮಿ, ನೆಲ ನರೇಂದ್ರಬಾಬು, ಪ್ರೊ.ಎಂ.ವಿ ರಾಜೀವ್ ಗೌಡ ಹಾಗೂ ಜಿ.ಸಿ.ಚಂದ್ರಶೇಖರ್ ಅವರು ಚುನಾವಣೆ ಕಣದಲ್ಲಿದ್ದರು. ಅಂತಿಮವಾಗಿ ನಾರಾಯಣ ಸ್ವಾಮಿ ಅವರು ಆಯ್ಕೆಯಾಗಿದ್ದಾರೆ. ಇದರೊಂದಿಗೆ ಬೆಂಗಳೂರು ಉತ್ತರದಲ್ಲಿ ನಾರಾಯಣಸ್ವಾಮಿ ಹಾಗೂ ಬಿಜೆಪಿ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರ ಮಧ್ಯೆ ನೇರ ಹಣಾಹಣಿ ಏರ್ಪಡಲಿದೆ.
ಜನತಾ ಪರಿಹಾರದ ಹಿನ್ನೆಲೆಯುಳ್ಳ ನಾರಾಯಣಸ್ವಾಮಿ 1996ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಜನತಾ ದಳದ ಅಭ್ಯರ್ಥಿಯಾಗಿ ಸಂಸತ್ತಿಗೆ ಆಯ್ಕೆಯಾಗಿದ್ದರು. ಕಳೆದ ವಿಧಾನಸಭೆ ಚುನಾವಣೆಗೂ ಮುನ್ನ ಜನತಾ ದಳವನ್ನು ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು.