ಶ್ರೀರಾಮುಲು, ಪ್ರತಾಪ್ ಸಿಂಹ ಬಿಜೆಪಿಗೆ ಸೇರ್ಪಡೆ
ಬಿಎಸ್ಆರ್ ಕಾಂಗ್ರೆಸ್ ಸಂಸ್ಥಾಪಕ...
ಬೆಂಗಳೂರು: ಬಿಎಸ್ಆರ್ ಕಾಂಗ್ರೆಸ್ ಸಂಸ್ಥಾಪಕ ಶ್ರೀರಾಮುಲು ಹಾಗೂ ಪತ್ರಕರ್ತ ಪ್ರತಾಪ್ ಸಿಂಹ ಅವರು ಶುಕ್ರವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಅವರ ನೇತೃತ್ವದಲ್ಲಿ ಮಾಜಿ ಸಚಿವ ಶ್ರೀರಾಮುಲು ಅವರು ಪಕ್ಷ ಸೇರ್ಪಡೆಯಾದರು. ಈ ವೇಳೆ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಸೇರಿದಂತೆ ಹಲವು ಬಿಜೆಪಿ ಮುಖಂಡರ ಉಪಸ್ಥಿತರಿದ್ದರು.
ಶ್ರೀರಾಮುಲು ಸೇರ್ಪಡೆಗೂ ಮುನ್ನ, ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪತ್ರಕರ್ತ ಪ್ರತಾಪ್ ಸಿಂಹ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಶಿವಲಿಂಗಯ್ಯ ಅವರು ಬಿಜೆಪಿ ಕಚೇರಿಯಲ್ಲಿ ಪಕ್ಷದ ಪ್ರಾಥಮಿಕ ಸದಸ್ಯದತ್ವ ಪಡೆಯುವ ಮೂಲಕ ಅಧಿಕೃತವಾಗಿ ಸೇರ್ಪಡೆಯಾದರು.
ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ಮಾತನಾಡಿದ ಶ್ರೀರಾಮುಲು, ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂಬ ಉದ್ದೇಶದಿಂದ ಪಕ್ಷಕ್ಕೆ ಸೇರ್ಪಡೆಗೊಡಿದ್ದೇನೆ ಎಂದು ಹೇಳಿದ್ದಾರೆ.
ನನ್ನ ಸೇರ್ಪಡೆಗೆ ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಸೇರಿ ಯಾರೂ ವಿರೋಧಿಸಿಲ್ಲ ಎಂದ ಅವರು ನಾನು ಕೇವಲ ವಾಲ್ಮಿಕಿ ಜನಾಂಗಕ್ಕೆ ಸೇರಿದವನಲ್ಲ ಎಂದು ಶ್ರೀರಾಮುಲು ಹೇಳಿದ್ದಾರೆ.