ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಅನಂತ್ ಕುಮಾರ್ ಸಾಧನೆ ಶೂನ್ಯ: ನಿಲೇಕಣಿ

ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಅನಂತ್ ಕುಮಾರ್ ಅವರ ಸಾಧನೆ ಶೂನ್ಯ, ಅವರು ಪ್ರತಿನಿಧಿಸುತ್ತಿರುವ ಬೆಂಗಳೂರು..

Lingaraj Badiger
Updated On : 15 Mar 2014, 2:19 am

ಬೆಂಗಳೂರು: ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಅನಂತ್ ಕುಮಾರ್ ಅವರ ಸಾಧನೆ ಶೂನ್ಯ, ಅವರು ಪ್ರತಿನಿಧಿಸುತ್ತಿರುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಅವರು ದೂರ ಉಳಿದದ್ದೇ ಒಂದು ದೊಡ್ಡ ಸಾಧನೆ ಎಂದು ಬೆಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಂದನ್ ನಿಲೇಕಣಿ ಅವರು ಹೇಳಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾದ ನಂತರ ನಗರದಲ್ಲಿ ಮೊದಲ ಬಾರಿಗೆ ಬೆಂಗಳೂರು ಪ್ರೆಸ್ ಕ್ಲಬ್ ಹಾಗೂ ಬೆಂಗಳೂರು ವರದಿಗಾರರ ಕೂಟ ಏರ್ಪಡಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ನಿಲೇಕಣಿ, ತಮ್ಮ ಪ್ರತಿಸ್ಪರ್ಧಿ ಅನಂತ್ ಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಬೆಂಗಳೂರು ದಕ್ಷಿಣದಿಂದ ಅನಂತ್ ಕುಮಾರ್ ಅವರು ಐದು ಬಾರಿ ಸಂಸದರಾಗಿ ಹಾಗೂ ಕೇಂದ್ರದಲ್ಲಿ ಸಚಿವರೂ ಆಗಿ ಕಾರ್ಯನಿರ್ವಹಿಸಿದ್ದಾರೆ. ಆದರೆ ಬೆಂಗಳೂರಿನ ಜನರಿಗಾಗಿ ಅವರು ಏನೂ ಕೆಲಸ ಮಾಡಿಲ್ಲ. ಹೀಗಾಗಿ ಅವರು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಚುನಾವಣೆ ಎದುರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ನಿಲೇಕಣಿ ಹೇಳಿದರು.

ಈ ಬಾರಿ ಕ್ಷೇತ್ರದ ಜನತೆ ತಮ್ಮ ಸಂಪರ್ಕಕ್ಕೆ ಸಿಗುವ ಹಾಗೂ ತಮ್ಮ ಸಮಸ್ಯೆಗಳನ್ನು ಪರಿಹರಿಸುವ ವ್ಯಕ್ತಿಯನ್ನು ಆಯ್ಕೆ ಮಾಡುತ್ತಾರೆ. ಹೀಗಾಗಿ ತಮ್ಮ ಗೆಲುವು ಖಚಿತ ಎಂದು ನಂದನ್ ನಿಲೇಕಣಿ ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ತಾವು ಹಣ ಬಲ ಪ್ರದರ್ಶನ ಮಾಡುವುದಕ್ಕಾಗಿ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ಬದಲಾಗಿ ದೇಶದ ರಾಜಕೀಯದಲ್ಲಿ ಏನಾದರೂ ಬದಲಾವಣೆ ತರಬೇಕು ಎಂಬ ಉದ್ದೇಶದಿಂದ ರಾಜಕೀಯ ಪ್ರವೇಶ ಮಾಡಿರುವುದಾಗಿ ನಿಲೇಕಣಿ ಸ್ಪಷ್ಟಪಡಿಸಿದರು.

ಇನ್ನು ಕಾಂಗ್ರೆಸ್ ಪಕ್ಷವನ್ನೇ ಸೇರಿದ್ದೇಕೆ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ನಿಲೇಕಣಿ, ದೇಶದಲ್ಲಿ ಸುಧಾರಣೆ ತರಲು ಸಾಧ್ಯವಿರುವುದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಸಾಧ್ಯ ಮತ್ತು ಕಾಂಗ್ರೆಸ್‌ನ ತತ್ವ, ಸಿದ್ಧಾಂತಗಳ ಮೇಲೆ ನನಗೆ ನಂಬಿಕೆ ಇದೆ. ಹೀಗಾಗಿ ನಾನು ಕಾಂಗ್ರೆಸ್ ಸೇರಿದೆ ಎಂದರು.

ಬಿಜೆಪಿ ಅಧಿಕಾರಕ್ಕೆ ಬಂದರೆ 'ಆಧಾರ್‌' ಯೋಜನೆ ರದ್ದು ಮಾಡುವುದಾಗಿ ಹೇಳುತ್ತಿಯಲ್ಲ ಎಂಬ ಪ್ರಶ್ನೆಗೆ, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲೂ ಆಧಾರ್ ಯೋಜನೆ ಯಶಸ್ವಿಯಾಗಿ ಜಾರಿಯಾಗುತ್ತಿದೆ. ಆಧಾರ್ ದೇಶದ ಎಲ್ಲ ನಾಗರಿಕರಿಗೂ ಗುರುತಿನ ಚೀಟಿ ನೀಡುವಂತಹ ಮಹತ್ವದ ಯೋಜನೆಯಾಗಿದ್ದು, ಇದನ್ನು ರಾಜಕೀಯ ದೃಷ್ಟಿಯಿಂದ ನೋಡುವುದು ಸರಿಯಲ್ಲ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement