ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ದೇವೇಗೌಡರ ಜತೆ ಜಾಫರ್ ಷರೀಫ್ ಮಾತುಕತೆ

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತಮಗೆ ಟಿಕೆಟ್ ನಿರಾಕರಿಸಿರುವುದರಿಂದ ತ್ರೀವ ಅಸಮಾಧಾನಗೊಂಡಿರುವ...

Mainashree
Updated On : 15 Mar 2014, 6:25 am

ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತಮಗೆ ಟಿಕೆಟ್ ನಿರಾಕರಿಸಿರುವುದರಿಂದ ತ್ರೀವ ಅಸಮಾಧಾನಗೊಂಡಿರುವ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಸಿ.ಕೆ ಜಾಫರ್ ಷರೀಫ್ ಅವರು ಶನಿವಾರ ಜೆಡಿಎಸ್ ಮುಖ್ಯಸ್ಥ ಎಚ್.ಡಿ ದೇವೇಗೌಡ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಜಾಫರ್ ಷರೀಫ್ ಅವರು ಕಾಂಗ್ರೆಸ್ ಟಿಕೆಟ್ ಬಯಸಿದ್ದರು. ಆದರೆ ಕಾಂಗ್ರೆಸ್ ಷರೀಪ್ ಅವರಿಗೆ ಟಿಕೆಟ್ ನಿರಾಕರಿಸಿ ಯುವ ಕಾಂಗ್ರೆಸ್ ಮುಖಂಡ ರಿಜ್ವಾನ್ ಅರ್ಷದ್ ಅವರಿಗೆ ಟಿಕೆಟ್ ನೀಡಿದೆ. ಪಕ್ಷದ ಈ ನಿರ್ಧಾರದಿಂದ ಆಕ್ರೋಶಗೊಂಡಿರುವ ಷರೀಫ್ ಅವರು ಇಂದು ದೇವೇಗೌಡರನ್ನು ಭೇಟಿ ಮಾಡಿ ಮುಂದಿನ ರಾಜಕೀಯ ನಿರ್ಧಾರಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಈಗಾಗಲೇ ಕಾಂಗ್ರೆಸ್ ಪಕ್ಷವನ್ನು ತೊರೆಯಲು ಮಾನಸಿಕವಾಗಿ ಸಿದ್ಧರಾಗಿರುವ ಷರೀಫ್ ಅವರು ಜೆಡಿಎಸ್ ಸೇರುವ ಬಗ್ಗೆ ಒಲವು ತೋರಿದ್ದಾರೆ. ಇಂದಿನ ಭೇಟಿಯ ಸಂಧರ್ಭದಲ್ಲಿ ದೇವೇಗೌಡರು ಸಹ ಷರೀಫ್ ಅವರನ್ನು ಪಕ್ಷಕ್ಕೆ ಆಹ್ವಾನಿಸಿದ್ದಾರೆ. ಷರೀಫ್ ಅವರು ಜೆಡಿಎಸ್ ಸೇರಿದ್ದೇ ಆದಲ್ಲಿ ಪಕ್ಷದಲ್ಲಿ ಅವರಿಗೆ ಸೂಕ್ತ ಸ್ಥಾನ ಮಾನದ ಜೊತೆಗೆ ಅವರು ಬಯಸಿದ ಕ್ಷೇತ್ರದಲ್ಲಿ ಟಿಕೆಟ್ ನೀಡಲು ದೇವೇಗೌಡರು ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ. ಬೆಂಗಳೂರು ಕೇಂದ್ರ ಅಥವಾ ಮೈಸೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಫರ್ಧಿಸುವ ಬಗ್ಗೆ ಗಂಭೀರವಾಗಿ ಪರಿಶೀಲಿಸುವಂತೆ ದೇವೇಗೌಡರು ಷರೀಫ್ ಅವರಿಗೆ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಷರೀಫ್ ಅವರು ಇಂದು ಅಥವಾ ನಾಳೆ ಹಜ್ ಯಾತ್ರೆಗೆ ತೆರಳಲಿದ್ದು, ಅಲ್ಲಿಂದ ಹಿಂದಿರುಗಿದ ನಂತರ ಮುಂದಿನ ರಾಜಕೀಯ ಹೆಜ್ಜೆಯ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ರಿಜ್ವಾನ್ ಅವರು ಜಾಫರ್ ಷರೀಫ್ ಅವರನ್ನು ಇಂದು ಭೇಟಿ ಮಾಡಿ, ಕಾಂಗ್ರೆಸ್ ಪಕ್ಷ ತೊರೆಯದಂತೆ ಮನವಿ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement