ಎಂ.ಡಿ. ಲಕ್ಷ್ಮಿನಾರಾಯಣ್ ಕಾಂಗ್ರೆಸ್ಗೆ ಸೇರ್ಪಡೆ?
ತುರುವೆಕೆರೆ ಕ್ಷೇತ್ರದ ಮಾಜಿ ಶಾಸಕ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಬೆಂಬಲಿಗ ಎಂ.ಡಿ.ಲಕ್ಷ್ಮೀನಾರಾಯಣ ಅವರು ಕಾಂಗ್ರೆಸ್ ಪಕ್ಷವನ್ನು ಸೇರಲ್ಲಿದ್ದಾರೆ.
ಬೆಂಗಳೂರು: ತುಮಕೂರಿನ ತುರುವೆಕೆರೆ ಕ್ಷೇತ್ರದ ಮಾಜಿ ಶಾಸಕ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಬೆಂಬಲಿಗ ಎಂ.ಡಿ.ಲಕ್ಷ್ಮೀನಾರಾಯಣ ಅವರು ಕಾಂಗ್ರೆಸ್ ಪಕ್ಷವನ್ನು ಸೇರಲ್ಲಿದ್ದಾರೆ.
ಬೆಂಗಳೂರಿನಲ್ಲಿ ಇಂದು ನಡೆದ ಬೆಂಬಲಿಗರ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದ್ದು, ಶೀಘ್ರದಲ್ಲಿಯೇ ಲಕ್ಷ್ಮೀನಾರಾಯಣ್ ಅವರು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ತುರುವೆಕೆರೆ ಕ್ಷೇತ್ರದ ಮಾಜಿ ಶಾಸಕರಾಗಿರುವ ಲಕ್ಷ್ಮೀನಾರಾಯಣ ಅವರು ಕೆಜೆಪಿ ಪಕ್ಷವನ್ನು ತೊರೆದು, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಸಿದ್ಧರಾಗಿದ್ದಾರೆ. ಇದೇ ಮಾರ್ಚ್ 18ರಂದು ಕೆಪಿಸಿಸಿ ಸಭೆಯಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳಲಿದೆ.
ಈ ಹಿಂದೆ ಬಿಜೆಪಿ ಪಕ್ಷದಲ್ಲಿದ್ದ ಲಕ್ಷ್ಮೀನಾರಾಯಣ ಅವರು ಬಿಎಸ್ ಯಡಿಯೂರಪ್ಪ ಅವರ ಕಟ್ಟಾ ಬೆಂಬಲಿಗರಾಗಿದ್ದರು. ಬಿಜೆಪಿ ವಿರುದ್ಧ ಬಿಎಸ್ವೈ ಸಿಡಿದೆದ್ದು ಕೆಜೆಪಿ ಪಕ್ಷವನ್ನು ಕಟ್ಟಿದಾಗಲೂ ಅವರು ಕೂಡ ಬಿಜೆಪಿಯನ್ನು ತೊರೆದು ಬಿಎಸ್ವೈ ಅವರೊಂದಿಗೆ ಕೆಜೆಪಿಗೆ ಆಗಮಿಸಿದ್ದರು. ಇದೀಗ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕೆಜೆಪಿ ತೊರೆದಿರುವ ಲಕ್ಷ್ಮೀನಾರಾಯಣ ಅವರು ಕಾಂಗ್ರೆಸ್ ಪಕ್ಷವನ್ನು ಸೇರಲು ತುದಿಗಾಲಲ್ಲಿ ನಿಂತಿದ್ದಾರೆ.